ಕುಶಾಲನಗರ, ಜ. 6: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ವಲಯ ಪ್ರಗತಿಬಂಧು ಸ್ವಸಹಾಯ ಒಕ್ಕೂಟ ಹಾಗೂ ಸ್ಥಳಿಯ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಕರಪತ್ರ ಬಿಡುಗಡೆ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು.

ಸ್ಥಳೀಯ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿ ದೇವಾಲಯ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಆರ್. ಶಿವಾನಂದ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ಕರಪತ್ರ ಬಿಡುಗಡೆಗೊಳಿಸಿದರು.

ಈ ಸಂದರ್ಭ ಪ್ರಾಸ್ತಾವಿಕ ನುಡಿಗಳಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಪ್ರಕಾಶ್, ಶ್ರೀ ಕ್ಷೇತ್ರ ಧರ್ಮಸ್ಥಳ ದೇಶದಲ್ಲಿಯೇ ಅತ್ಯಂತ ಸ್ವಚ್ಛ ಧಾರ್ಮಿಕ ನಗರಿ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಈ ಹಿನ್ನೆಲೆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಸ್ವಚ್ಛ ಭಾರತ ನಿರ್ಮಲ ಶ್ರದ್ಧಾ ಕೇಂದ್ರಗಳ ಪರಿಕಲ್ಪನೆಯಡಿ ತಾ. 1 ರಿಂದ ಆರಂಭಿಸಿ 13 ರೊಳಗಾಗಿ ರಾಜ್ಯದ ದೇವಾಲಯ, ಮಸೀದಿ, ಚರ್ಚ್‍ಗಳು ಸೇರಿದಂತೆ ನದಿ ತಟಗಳ ಹಾಗೂ ಧಾರ್ಮಿಕ ಕೇಂದ್ರಗಳ ಪರಿಸರವನ್ನು ಸ್ವಚ್ಛತೆಗೊಳಿಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಹಿನ್ನೆಲೆ ಸೋಮವಾರಪೇಟೆ ತಾಲೂಕಿನಲ್ಲಿ 71 ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಲಿದೆ. ಕುಶಾಲನಗರ ವಲಯದಲ್ಲಿ ತಾ. 8 ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಾವೇರಿ ನದಿ ತಟದಲ್ಲಿ ಸ್ವಚ್ಛತಾ ಕಾರ್ಯಕ್ರಮ ಆರಂಭಿಸಿ ಪಟ್ಟಣ ವ್ಯಾಪ್ತಿ ಸೇರಿದಂತೆ ಗ್ರಾಮೀಣ ಭಾಗಗಳ ದೇವಾಲಯ ಗಳಲ್ಲಿ ಸ್ವಚ್ಛತೆ ಕಾರ್ಯ ನಡೆಯಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರದ ಶ್ರೀ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷರಾದ ವಿ.ಎನ್. ವಸಂತ ಕುಮಾರ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿದರು.

ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಸೇವಾ ಟ್ರಸ್ಟ್ ನಿರ್ದೇಶಕ ಡಿ.ಆರ್. ಸೋಮ ಶೇಖರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಚಂದ್ರಶೇಖರ್ ಸೇರಿದಂತೆ ಸೇವಾ ಪ್ರತಿನಿಧಿಗಳು, ಒಕ್ಕೂಟದ ಸದಸ್ಯರು ಇದ್ದರು. ಸೇವಾ ಪ್ರತಿನಿಧಿಗಳಾದ ಸುಶೀಲಾ ಪ್ರಾರ್ಥಿಸಿ, ಚಂದ್ರಾವತಿ ಸ್ವಾಗತಿಸಿದರೆ, ವಿಜಯಲಕ್ಷ್ಮಿ ವಂದಿಸಿದರು.