ಮಡಿಕೇರಿ, ಸೆ. 26: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿ ಸುತ್ತಿರುವ ಕೆ.ಜೆ. ಜಾರ್ಜ್ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವದನ್ನು ವಿರೋಧಿಸಿ ಧರಣಿ ನಡೆಸಿದ ಜಾತ್ಯತೀತ ಜನತಾ ದಳದ ಕಾರ್ಯಕರ್ತರು ಜಾರ್ಜ್ ಅವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿ ಜಿಲ್ಲಾಧಿ ಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಅವರ ನೇತೃತ್ವದಲ್ಲಿ ಇಲ್ಲಿನ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟಿಸಿದರು. ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭ ಮಾತನಾಡಿದ ಸಂಕೇತ್ ಪೂವಯ್ಯ ಅವರು ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿದ್ದ ಸಚಿವರಾಗಿದ್ದ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಿದ ಬಳಿಕ ಪ್ರಕರಣದ ಬಗ್ಗೆ ಸಿಐಡಿ ತನಿಖೆಯಾಗಿದೆ. ಆದರೆ, ರಾಜಕೀಯ ಒತ್ತಡ ಹಾಗೂ ಸರಕಾರದ ಹಸ್ತಕ್ಷೇಪದ ಹಿನ್ನೆಲೆಯಲ್ಲಿ ಕಳೆದ ತಾ. 19 ರಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಈ ವರದಿಯನ್ನು ವಿರೋಧಿಸಿ ಪ್ರತಿಭಟನಾ ಅರ್ಜಿ ಸಲ್ಲಿಸಲು ದೂರುದಾರರಿಗೆ ಅವಕಾಶವಿದೆ.

ಇದೀಗ ನ್ಯಾಯಾಲಯ ಪ್ರಕರಣವನ್ನು ತಾ. 29ಕ್ಕೆ ಮುಂದೂಡಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ನ್ಯಾಯಾಂಗ ತನಿಖೆಗೂ ಆದೇಶಿಸಿದ್ದು, ನ್ಯಾಯಾಂಗ ತನಿಖೆಯು ಯಾವ ಹೆಜ್ಜೆಯನ್ನು ಇಟ್ಟಿಲ್ಲ. ಪ್ರಕರಣ ಇನ್ನೂ ನ್ಯಾಯಾಲಯದಲ್ಲೇ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರ್ಜ್ ಅವರನ್ನು ತರಾತುರಿಯಲ್ಲಿ ಸಚಿವ ಸ್ಥಾನ ನೀಡಿರುವದು ಖಂಡನೀಯವೆಂದರು.

ಗಣಪತಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸದನದಲ್ಲಿ ಹಾಗೂ ರಾಜ್ಯಾದ್ಯಂತ ಹೋರಾಟ ಮಾಡಲಾಯಿತಾದರೂ ಇದೀಗ ನ್ಯಾಯ ದೊರಕದಂತಾಗಿದೆ. ಈ ಹಿನ್ನೆಲೆಯಲ್ಲಿ ಜಾರ್ಜ್‍ರನ್ನು ಸಚಿವ ಸ್ಥಾನದಿಂದ ಕೈ ಬಿಡುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸ ಲಾಗುವದು. ರಾಜ್ಯಪಾಲರು ತಮ್ಮ ಅಧಿಕಾರವನ್ನು ಉಪಯೋಗಿಸಿ ಜಾರ್ಜ್ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಲು ಆದೇಶ ನೀಡಬೇಕೆಂದು ಒತ್ತಾಯಿಸಲಾಗಿದೆ ಎಂದು ಸಂಕೇತ್ ತಿಳಿಸಿದರು.

ಈ ಸಂದರ್ಭ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್. ಸುರೇಶ್, ಅಲ್ಪಸಂಖ್ಯಾತರ ಘಟಕದ ಮನ್ಸೂರ್, ಯುವ ಘಟಕದ ಸಿ.ಎಲ್. ವಿಶ್ವ, ಹಿಂದುಳಿದ ವರ್ಗದ ಯೋಗೇಶ್‍ಕುಮಾರ್, ಟಿ.ಡಿ. ಬೋಜಪ್ಪ, ಪಾಪಣ್ಣ, ಶಶಿ ಸುವರ್ಣ, ಮಹಿಳಾ ಘಟಕದ ಲತಾ, ಪಿ.ವಿ. ರೆನ್ನಿ, ಆದಿಲ್ ಪಾಷ ಇನ್ನಿತರರು ಭಾಗವಹಿಸಿದ್ದರು.