ಮಡಿಕೇರಿ, ಆ. 3: ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಬಿಜೆಪಿ ಹಿಂದುಳಿದ ವರ್ಗ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬೇಲೂರು ಲಕ್ಷ್ಮಣ್ ಕಾರ್ಯಕರ್ತರಿಗೆ ಕರೆ ನೀಡಿದರು.ನಗರದ ಬಾಲಭವನದಲ್ಲಿಂದು ನಡೆದ ಕೊಡಗು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗ ವಿಭಾಗದ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬ ಪದಾಧಿಕಾರಿ ಹಾಗೂ ಕಾರ್ಯಕರ್ತರು ತಮಗೆ ಪಕ್ಷ ವಹಿಸಿರುವಂತಹ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಆ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಪಣತೊಡ ಬೇಕೆಂದು ಲಕ್ಷ್ಮಣ್ ಹೇಳಿದರು.

ರಾಜ್ಯ ಕಾರ್ಯದರ್ಶಿ ಸತ್ಯಜಿತ್ ಸೂರತ್ಕಲ್ ಮಾತನಾಡಿ, ಹಿಂದುಳಿದ ವರ್ಗವನ್ನು ಸ್ವಾಭಿಮಾನಿ ಹಾಗೂ ಸ್ವಾವಲಂಬಿಗಳನ್ನಾಗಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗ ವಿಭಾಗವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಹಿಂದುಳಿದ ವರ್ಗವನ್ನು ಮೇಲೆತ್ತುವ ದಿಸೆಯಲ್ಲಿ ಪ್ರತಿಯೊಬ್ಬರೂ ಕಟಿಬದ್ದರಾಗಿರಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಮನು ಮುತ್ತಪ್ಪ ಮಾತನಾಡಿ, ಭಾರತೀಯ ಜನತಾ ಪಾರ್ಟಿ ತಾನು ಬೆಳೆಯು ವದರ ಜೊತೆಗೆ ಕಾರ್ಯಕರ್ತರನ್ನು ಬೆಳೆಸುವಂತಹ ಪಕ್ಷವಾಗಿದೆ. ಆದ್ದರಿಂದ ಕಾರ್ಯಕರ್ತರು ಬಿಜೆಪಿಗಾಗಿ ಶ್ರಮಿಸಬೇಕು. ಜೊತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಜನಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಗುಜರಾತ್‍ನಲ್ಲಿ ದಲಿತರ ಮೇಲೆ ನಡೆದ ಹಲ್ಲೆಗೆ ಬಿಜೆಪಿ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮಾಡಿರುವ ಆರೋಪ ಸರಿಯಲ್ಲ ಎಂದ ಅವರು ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಕಾಂಗ್ರೆಸ್ ಪ್ರಮುಖರಾದ ಮರಿಗೌಡ ಅವರು ಅವಮಾನಿಸಿದ ಸಂದರ್ಭ ಕಾಂಗ್ರೆಸ್ ಅಧ್ಯಕ್ಷರು ಎಲ್ಲಿದ್ದರು? ಎಂದು ಪ್ರಶ್ನಿಸಿದರು.

ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಆನಂದರಘು ಮಾತನಾಡಿ, ಪ್ರತಿ ತಿಂಗಳಿಗೊಮ್ಮೆ ಪದಾಧಿಕಾರಿಗಳ ಸಭೆ ಹಾಗೂ ಎರಡು ತಿಂಗಳಿಗೊಮ್ಮೆ ಕಾರ್ಯಕಾರಿಣಿ ಸಭೆ ನಡೆಸುವ ಮೂಲಕ ಹಿಂದುಳಿದ ವರ್ಗದ ಅಭಿವೃದ್ಧಿಗೆ ಒತ್ತು ನೀಡುವದಾಗಿ ನುಡಿದರು. ಈ ಸಂದರ್ಭ ರಾಜ್ಯ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಶಿವಕುಮಾರ್, ಪ್ರಮುಖರಾದ ಜೀವನ್, ಆಂಜನೇಯಪ್ಪ, ದೇವರಾಜ್ ಉಪಸ್ಥಿತರಿದ್ದರು. ಅನಿತಾ ದಿನೇಶ್ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಬಸವರಾಜ್ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸಿ.ಕೆ. ಬಾಲಕೃಷ್ಣ ವಂದಿಸಿದರು.