ಮಡಿಕೇರಿ, ಜೂ. 6: ಕುಶಾಲನಗರದ ಹಾರಂಗಿ ರಸ್ತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿಂಭಾಗದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ 1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತವಾದ ವಾಲ್ಮೀಕಿ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಗುಮ್ಮನಕೊಲ್ಲಿ ಹಾರಂಗಿ ರಸ್ತೆ ಬಳಿ ನಿರ್ಮಾಣಗೊಂಡಿರುವ ವಾಲ್ಮೀಕಿ ಭವನ ಉದ್ಘಾಟಿಸಿ ಮಾತನಾಡಿದ ಸಚಿವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ನೀಡಲಾಗುತ್ತದೆ ಎಂದರು.

ವಿದ್ಯಾಸಿರಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 400 ವಿದ್ಯಾರ್ಥಿ ನಿಲಯ ಸ್ಥಾಪಿಸಲು ಸರ್ಕಾರ ಚಿಂತನೆ ಮಾಡಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಎಸ್‍ಎಸ್‍ಎಲ್‍ಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿಗೆ ರೂ.20 ಸಾವಿರ, ಪದವಿ ಹಾಗೂ ಉನ್ನತ ಶಿಕ್ಷಣದಲ್ಲಿ ಉತ್ತೀರ್ಣನಾದ ವಿದ್ಯಾರ್ಥಿಗೆ ರೂ.1 ಲಕ್ಷ ಹಾಗೂ ವಿದೇಶದಲ್ಲಿ ವ್ಯಾಸಂಗ ಮಾಡಲು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ವೆಚ್ಚವನ್ನು ಭರಿಸುತ್ತದೆ ಎಂದರು.

ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಆದಿವಾಸಿ ಕುಟುಂಬಗಳಿಗೆ ಅರಣ್ಯ ಹಕ್ಕುಪತ್ರ ನೀಡಲಾಗಿದೆ. ಗಿರಿಜನರ ವಸತಿ ಯೋಜನೆ ಒದಗಿಸಲು ಅನುಕೂಲವಾಗುವಂತೆ ಒಂದು ಮನೆಗೆ ರೂ.2 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ ಎಂದರು.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಜಾರಿಗೆ ತಂದ ಎಲ್ಲಾ ಯೋಜನೆಗಳು ಪರಿಣಾಮಕಾರಿ ಯಾಗಿ ಅನುಷ್ಠಾನಗೊಳ್ಳಬೇಕು ಎಂದರು.

ಹಿಂದುಳಿದ ಸಮುದಾಯಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ಮೂಲಕ ಸರ್ಕಾರ ವಿವಿಧ ಸೌಲಭ್ಯ ಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ವೀಣಾ ಅಚ್ಚಯ್ಯ, ಜಿ.ಪಂ.ಸದಸ್ಯರಾದ ಕೆ.ಆರ್.ಮಂಜುಳಾ, ಕೆ.ಪಿ.ಚಂದ್ರಕಲಾ, ತಾ.ಪಂ.ಸದಸೆÀ್ಯ ಪುಷ್ಪಾ ಜನಾರ್ಧನ್, ಮುಳ್ಳುಸೋಗೆ ಗ್ರಾ.ಪಂ.ಅಧ್ಯಕ್ಷೆ ಭವ್ಯ, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಜಿಲ್ಲಾ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಎನ್.ಅಶೋಕ್, ಮುಖಂಡರಾದ ಚಂದ್ರು, ವೈ.ಟಿ.ಪರಮೇಶ್, ಕೊಡಗು ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಆರ್.ಜಿ.ಸಚಿನ್, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಯೋಜನಾ ಸಮನ್ವಯಾಧಿಕಾರಿ ಕೆ.ಎಚ್.ಸತೀಶ್, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಾಮೇಗೌಡ ಮತ್ತಿತರರು ಇದ್ದರು.