ಸೋಮವಾರಪೇಟೆ, ಸೆ.17: ಸುವರ್ಣ ಮಹೋತ್ಸವದ ಅಂಗವಾಗಿ ನವೀಕರಣಗೊಂಡ ಇಲ್ಲಿನ ವಿವಿಧೋದ್ಧೇಶ ಸಹಕಾರ ಸಂಘದ ನೂತನ ಕಚೇರಿಯನ್ನು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಉದ್ಘಾಟಿಸಿದರು.ನಂತರ ಕೊಡವ ಸಮಾಜದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಜಿಲ್ಲೆಯಲ್ಲಿರುವ ಸಹಕಾರ ಸಂಘಗಳು ಕೃಷಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿವೆ. ಇಲ್ಲಿನ ಕೃಷಿಕರು ಪ್ರಾಮಾಣಿಕತೆಗೆ ಹೆಸರುವಾಸಿಯಾಗಿದ್ದು, ಈ ಕಾರಣದಿಂದ ಜಿಲ್ಲೆಯ ಬಹುತೇಕ ಸಹಕಾರ ಸಂಘಗಳು ಲಾಭದ ಹಾದಿಯಲ್ಲಿವೆ ಎಂದರು.
ಸಹಕಾರ ಯೂನಿಯನ್ ಅಧ್ಯಕ್ಷ ಮನುಮುತ್ತಪ್ಪ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ದಿನಗಳಲ್ಲಿ ನಮ್ಮ ಹಿರಿಯ ಸಹಕಾರಿಗಳು ಪ್ರಾಮಾಣಿಕ ಸೇವೆ ಸಲ್ಲಿಸಿದ್ದರಿಂದಲೇ ಇಂದು ಸಹಕಾರಿ ಕ್ಷೇತ್ರ ಮಹತ್ತರವಾಗಿ ಬೆಳೆದಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷ ಮನು ಮುತ್ತಪ್ಪ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಬಿ.ಡಿ. ಮಂಜುನಾಥ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸಹಕಾರ ಸಂಘಗಳು ಸದೃಢವಾಗಿದೆ. ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರು ಶುದ್ಧೀಕರಣ ಮತ್ತು ಆಧುನೀಕರಣದತ್ತ ಗಮನಹರಿಸಿದರೆ ಮಾತ್ರ ಕ್ಷೇತ್ರದ ಬೆಳವಣಿಗೆ ಸಾಧ್ಯ ಎಂದರು.
ನವೀಕರಣಗೊಂಡ ಕಚೇರಿಯನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಇ- ಸ್ಟ್ಯಾಂಪಿಂಗ್ ವಿತರಣೆ ಕೊಠಡಿಯನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕ ಬಲ್ಲಾರಂಡ ಮಣಿ ಉತ್ತಪ್ಪ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಿ.ಎ.ಉದಯ ವಹಿಸಿದ್ದರು. ವೇದಿಕೆಯಲ್ಲಿ ನಬಾರ್ಡ್‍ನ ಸಹಾಯಕ ಮಹಾ ಪ್ರಬಂಧಕ ಎಂ.ಸಿ. ನಾಣಯ್ಯ, ಸಹಕಾರ ಸಂಘಗಳ ಉಪನಿಬಂಧಕ ಜಿ.ಆರ್. ವಿಜಯ ಕುಮಾರ್, ಸಹಾಯಕ ನಿಬಂಧಕ ವಿಕ್ರಮ ರಾಜೇ ಅರಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎ.ಪಾರ್ವತಿ ಉಪಸ್ಥಿತರಿದ್ದರು.
ಇದೇ ಸಂದರ್ಭ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧ್ಯಕ್ಷರುಗಳು, ಉಪಾಧ್ಯಕ್ಷರು, ಹಾಗೂ ಸಿಬ್ಬಂದಿಗಳಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು.