ಮಡಿಕೇರಿ, ನ. 20: ಕೊಡಗು ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಹೇಳಿದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರು ಮಡಿಕೇರಿಯ ಎಸ್ಪಿ ಕಚೇರಿಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿದ ಸಂದರ್ಭ ಮಾತನಾಡಿದ ರಾಜೇಂದ್ರ ಪ್ರಸಾದ್, ತನ್ನ ಅಧಿಕಾರಾವಧಿಯಲ್ಲಿ ಕೊಡಗು ಜಿಲ್ಲಾಡಳಿತ, ಇಲಾಖಾ ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳ, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗಿದೆ ಎಂದರಲ್ಲದೆ, ಇದೇ ವಾತಾವರಣ ಮುಂದುವರೆಯುವಲ್ಲಿ ಎಲ್ಲರ ಸಹಕಾರ ಅತ್ಯಗತ್ಯ ಎಂದಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆದ ಅಹಿತಕರ ಘಟನೆಗಳು, ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗಲು ಸಾರ್ವಜನಿಕರ ಸ್ಪಂದನ ದೊರೆತಿದೆ ಎಂದ ವರಿಷ್ಠಾಧಿಕಾರಿಗಳು, ತಲಕಾವೇರಿಯಲ್ಲಿ ತೀರ್ಥೋದ್ಭವ ಸಂದರ್ಭ ಜಿಲ್ಲಾಡಳಿತ ಸೇರಿದಂತೆ ದೇವಾಲಯ ಆಡಳಿತಾಧಿಕಾರಿಗಳು ಹಾಗೂ ಸ್ಥಳೀಯ ಭಕ್ತಾದಿಗಳ ಸಹಕಾರದೊಂದಿಗೆ ಇಲಾಖೆಗೆ ಸಮರ್ಪಕ ಬಂದೋಬಸ್ತ್ ಕಲ್ಪಿಸಲು ಸಾಧ್ಯವಾಗಿದೆ. ಅದೇ ರೀತಿ ಈ ಸಾಲಿನಲ್ಲಿ ನಡೆದ ಟಿಪ್ಪು ಜಯಂತಿ ಸಂದರ್ಭ ಯಾವದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಇಲಾಖೆಯಿಂದ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿತ್ತು ಎಂದು ತಿಳಿಸಿದ್ದಾರೆ. ಈ ಸಂದರ್ಭ ಹಗಲಿರುಳು ಶ್ರಮಿಸಿದ ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿಗಳ ಕರ್ತವ್ಯ ಪ್ರಜ್ಞೆಯನ್ನು ಶ್ಲಾಘಿಸಿದರು.

ಕೊಡಗು ಜಿಲ್ಲೆಯಲ್ಲಿ ಪರ-ವಿರೋಧ ಹೇಳಿಕೆಗಳು ಜನರಲ್ಲಿ ಅತಿಯಾದ ಗೊಂದಲ ಮೂಡಿಸುತ್ತಿದ್ದು, ಸಂಘರ್ಷಕ್ಕೆ ಕಾರಣವಾಗುತ್ತಿದ್ದು, ಈ ಬಗ್ಗೆ ಐಕ್ಯತೆಗೆ ಪ್ರಯತ್ನಿಸಬೇಕಾಗಿದೆ ಎಂದರು. ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೆಲಸದ ಒತ್ತಡ ಮಿತಿಮೀರಿದ್ದು ಇದರಿಂದ ಸಿಬ್ಬಂದಿಗಳ ಮಾನಸಿಕ ಒತ್ತಡ ಅಧಿಕವಾಗುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಈ ನಡುವೆ ಜಿಲ್ಲೆಯಿಂದ ಪೊಲೀಸ್ ಸಿಬ್ಬಂದಿಗಳು ಬೇರೆಡೆಗೆ ವರ್ಗಾವಣೆಗೆ ಕೋರುತ್ತಿರುವ ಬೆಳವಣಿಗೆಗಳು ಅಧಿಕಗೊಂಡಿದ್ದು, ಈಗಾಗಲೇ ಜಿಲ್ಲೆಯಿಂದ 46 ಸಿಬ್ಬಂದಿಗಳು ಕೋರಿಕೆ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಒತ್ತಡದ ಕೆಲಸ ಹಿನ್ನೆಲೆ ಸ್ಥಳೀಯ ಅಭ್ಯರ್ಥಿಗಳು ಇಲಾಖೆಗೆ ಸೇರ್ಪಡೆಗೊಳ್ಳಲು ಹಿಂಜರಿಯುತ್ತಿರುವದರೊಂದಿಗೆ ಕೆಲವರು ನೌಕರಿಗೆ ರಾಜೀನಾಮೆ ನೀಡಲು ಮುಂದಾಗುತ್ತಿರುವದಾಗಿ ಮಾಹಿತಿ ಒದಗಿಸಿದರು.

ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಶಸ್ವಿಯಾದ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ಪರವಾಗಿ ರಾಜೇಂದ್ರ ಪ್ರಸಾದ್ ಅವರನ್ನು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯಿಂದ ಸನ್ಮಾನಿಸಿ, ಗೌರವಿಸಿದ ಸಂದರ್ಭ ಸಮಿತಿ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ರೀನಾ ಪ್ರಕಾಶ್, ಆಶಾ ಸುಬ್ಬಯ್ಯ, ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್, ಬಿ.ಡಿ. ಅಣ್ಣಯ್ಯ, ವಿನೋದ್ ಇದ್ದರು.