ಮೂರ್ನಾಡು, ಸೆ. 28: ಸ್ವಚ್ಛತೆಯೆ ನಮ್ಮ ಗುರಿ ಹಾಗೂ ನಮ್ಮ ಪ್ರಯತ್ನ ಎಂಬ ಉದ್ದೇಶವನ್ನಿಟ್ಟುಕೊಂಡು ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ಪ್ರಾರಂಭಿಸಲಾದ ಕ್ಲೀನ್ ಇಂಡಿಯಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮೂರ್ನಾಡು ವಿದ್ಯಾಸಂಸ್ಥೆಯ ಪ್ರಥಮ ದಜೆರ್À ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಾರುಲತಾ ಸೋಮಲ್ ಉದ್ಘಾಟಿಸಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಸ್ವಚ್ಛ ಭಾರತ್ ಕಾರ್ಯಕ್ರಮಕ್ಕೆ ದೇಶದಲ್ಲಿ ಉತ್ತಮ ಸ್ಪಂದನ ದೊರಕಿದೆ. ಪ್ರತಿಯೊಬ್ಬರೂ ಸ್ವಚ್ಛತೆಯತ್ತ ಗಮನ ಹರಿಸಿದರೆ ದೇಶವು ಸ್ವಚ್ಛಗೊಳ್ಳುವದರಲ್ಲಿ ಸಂಶಯವಿಲ್ಲ ಎಂದು ತಿಳಿಸಿ, ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟೀರ ಜಿ. ಮಾದಪ್ಪ ಮಾತನಾಡಿ, ಕಳೆದ ಸಾಲಿನಲ್ಲಿ ಕಾಲೇಜಿನ ಎನ್‍ಎಸ್‍ಎಸ್ ವಿದ್ಯಾರ್ಥಿಗಳು ವೀರಾಜಪೇಟೆಯಿಂದ ಮಾಕುಟ್ಟದ ವರೆಗೆ ಹಾಗೂ ಮಡಿಕೇರಿಯಿಂದ ಕುಶಾಲನಗರದವರೆಗೆ ಮುಖ್ಯ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಯಶಸ್ವಿಗೊಂಡಿದೆ. ಜಿಲ್ಲೆಯಲ್ಲಿ ಪ್ರವಾಸಿಗರು ಸ್ವಚ್ಛತೆಯನ್ನು ಕಾಪಾಡುವಲ್ಲಿ ಸಹಕಾರ ನೀಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿ ವಿದ್ಯಾಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ಸಾಂಸ್ಕøತಿಕ ಕೇಂದ್ರ ಸ್ಥಾಪನೆ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು.
ಮೂರ್ನಾಡು ವಿದ್ಯಾಸಂಸ್ಥೆ ಉಪಾಧ್ಯಕ್ಷ ಪಳಂಗಂಡ ಎಸ್. ಮುದ್ದಪ್ಪ, ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ, ಬಡುವಂಡ ಸುಬ್ರಮಣಿ, ಪೆಮ್ಮುಡಿಯಂಡ ವೇಣು ಅಪ್ಪಣ್ಣ, ದಾನಿಗಳಾದ ಬಾಚೆಟ್ಟೀರ ಲಾಲು ಮುದ್ದಯ್ಯ, ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲೆ ಸಿ.ಜೆ. ಪ್ರಿಯ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಎ.ಎಸ್. ರಶ್ಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಸ್.ಡಿ. ಪ್ರಶಾಂತ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಪದವಿ ಕಾಲೇಜಿನ ಕ್ಯಾಂಪಸ್ ಕ್ರಾನಿಕಲ್ ಎಂಬ ಮಾಸ ಪ್ರತಿಕೆಯನ್ನು ಬಿಡುಗಡೆಗೊಳಿಸಲಾಯಿತು
ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪಿ.ಕೆ. ರವಿಶಂಕರ್ ಸ್ವಾಗತಿಸಿ, ಪ್ರಥಮ ದರ್ಜೆ ಪದವಿ ಕಾಲೇಜಿನ ಎನ್‍ಎಸ್‍ಎಸ್ ಯೋಜನಾಧಿಕಾರಿ ಹರ್ಷ ಮಂದಣ್ಣ ಕಾರ್ಯಕ್ರಮ ನಿರೂಪಿಸಿ, ಪದವಿ ಪೂರ್ವ ಕಾಲೇಜಿನ ಎನ್‍ಎಸ್‍ಎಸ್ ಯೋಜನಾಧಿಕಾರಿ ಯು.ಸಿ. ಮಾಲತಿ ವಂದಿಸಿದರು.