ಮಡಿಕೇರಿ, ಫೆ. 3: ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ಆರೋಪಿಸಿ ನಗರಸಭಾ ಸದಸ್ಯರಿಬ್ಬರ ಸದಸ್ಯತ್ವ ರದ್ದುಗೊಳಿಸಬೇಕೆಂದು ಕೋರಿ ಕಾಂಗ್ರೆಸ್ ಪಕ್ಷ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣದ ವಿಚಾರಣೆ ಇಂದು ಮುಕ್ತಾಯವಾಗಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ.

ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆ ಸಂದರ್ಭ ನಗರಸಭಾ ಸದಸ್ಯರುಗಳಾದ ಶ್ರೀಮತಿ ಬಂಗೇರ ಹಾಗೂ ವೀಣಾಕ್ಷಿ ಇವರುಗಳು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದು, ಅವರುಗಳ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಕಾಂಗ್ರೆಸ್ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯದಲ್ಲಿ ವಾದ - ಪ್ರತಿವಾದಗಳು ನಡೆದವು. ಕಾಂಗ್ರೆಸ್ ಪರವಾಗಿ ವಕೀಲರಾದ ಶ್ರೀಧರನ್ ನಾಯರ್, ವೀಣಾಕ್ಷಿ ಹಾಗೂ ಶ್ರೀಮತಿ ಬಂಗೇರ ಇವರುಗಳ ಪರವಾಗಿ ವಕೀಲರಾದ ಸುಮಂತ್ ಪಾಲಾಕ್ಷ ವಾದ ಮಂಡಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರ್ಜಿದಾರರ ಪರ ಸಾಕ್ಷಿದಾರರನ್ನಾಗಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ರಮೇಶ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಇವರುಗಳ ವಿಚಾರಣೆ ಮಾಡಲಾಗಿದ್ದು, ಸುಮಾರು 23 ದಾಖಲಾತಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಸಧ್ಯದಲ್ಲಿಯೇ ತೀರ್ಪು ಹೊರ ಬೀಳಲಿದೆ ಎಂದು ತಿಳಿದುಬಂದಿದೆ.