ಸೋಮವಾರಪೇಟೆ, ಫೆ. 4: ಸರಕಾರಿ ಕಚೇರಿಯಲ್ಲಿ ಲಂಚ ಮತ್ತು ಭ್ರಷ್ಟಾಚಾರ ಮುಕ್ತ ಕೊಡಗು ನಿರ್ಮಾಣದ ಸಂಕಲ್ಪದೊಂದಿಗೆ ಕೊಡಗಿನಲ್ಲಿ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಸಂಘಟನೆ ಗೊಳ್ಳುತ್ತಿದೆ ಎಂದು ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎಸ್. ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಇಂದು ಸರಕಾರಿ ಕಚೇರಿಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಲಂಚವನ್ನು ನೀಡದೆ ಯಾವದೇ ಕೆಲಸವನ್ನು ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜನರು ಕಾನೂನು ಬದ್ಧ ಮತ್ತು ನ್ಯಾಯ ಬದ್ಧವಾದ ಕೆಲಸಗಳಿಗೂ ಲಂಚ ನೀಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.

ತಾಲೂಕು ಕಚೇರಿಯಲ್ಲಿ ಸರಕಾರ ತಂದಿರುವ ಸಕಾಲ ಮತ್ತು ಮಾಹಿತಿ ಹಕ್ಕು ಕಾಯ್ದೆ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜನರಿಗೆ ಮಾಹಿತಿ, ತರಬೇತಿ ಕಾರ್ಯಾಗಾರ ಹಾಗೂ ಜನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಿದೆ. ಈಗಾಗಲೇ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಗಿದೆ ಎಂದರು.

ವೇದಿಕೆಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಪಿ.ಎಸ್. ಮೋಹನ್, ಜಿಲ್ಲಾ ಕಾರ್ಯದರ್ಶಿ ಯಾಗಿ ಹೆಚ್.ಎಂ. ಸೋಮಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಕೆ.ಜೆ. ಪ್ರಸನ್ನ, ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಎಸ್. ಸುಬ್ರಮಣಿ, ಕಾರ್ಯದರ್ಶಿಯಾಗಿ ವಿ. ಮಾನಸ, ಸಂಘಟನಾ ಕಾರ್ಯದರ್ಶಿಯಾಗಿ ವಿ.ಎಲ್. ಚೇತನ್ ಅವರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ವೇದಿಕೆಗೆ ಸದಸ್ಯರನ್ನು ನೇಮಕ ಮಾಡಿಕೊಳ್ಳ ಲಾಗುವದು. ಸಾಮಾಜಿಕ ಹಿತಾಸಕ್ತಿ, ಹೋರಾಟದ ಸಂಕಲ್ಪ ಹೊಂದಿರುವ ವರು ವೇದಿಕೆಯ ಸದಸ್ಯರಾಗ ಬಹುದು. ರಾಜ್ಯದ ಯಾವದೇ ಭಾಗದಲ್ಲಿ ಭ್ರಷ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚಕ್ಕೆ ಬೇಡಿಕೆ ಇಟ್ಟರೆ ಸಹಾಯವಾಣಿ 8884277730 ಈ ಸಂಖ್ಯೆಗೆ ಕರೆ ಮಾಡಬಹುದು. ನಮಗೆ ಲಭ್ಯವಾಗುವ ಮಾಹಿಯನ್ನು ಕರ್ನಾಟಕ ಲೋಕಾಯುಕ್ತ ಅಥವಾ ಭ್ರಷ್ಟಾಚಾರ ನಿಗ್ರಹದಳ ಸಂಸ್ಥೆಗಳಿಗೆ ನೀಡಿ ಭ್ರಷ್ಟಾಚಾರದ ವಿರುದ್ದ ಹೋರಾಟ ನಡೆಸಲಾಗುವದು ಎಂದರು.

ತಾಲೂಕು ಘಟಕದ ಅಧ್ಯಕ್ಷ ಸುಬ್ರಮಣಿ ಮಾತನಾಡಿ, ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಗ್ರಾ.ಪಂ.ಗಳಲ್ಲಿ ಅಭಿವೃದ್ದಿ ಅಧಿಕಾರಿಗಳು ಮನೆ ನಿರ್ಮಾಣ ಮತ್ತಿತರ ಕೆಲಸಗಳಿಗೆ ಲಂಚದ ಬೇಡಿಕೆ ಇಡುತ್ತಿದ್ದಾರೆ. ಪ.ಪಂ. ವ್ಯಾಪ್ತಿಯ ಮಳಿಗೆಗಳಲ್ಲಿ ವರ್ತಕರು ಮತ್ತೊಬ್ಬರಿಗೆ ಪರಭಾರೆ ಮಾಡಿಕೊಳ್ಳುವ ಮೂಲಕ ಸರಕಾರಕ್ಕೆ ನಷ್ಟ ಉಂಟು ಮಾಡುತ್ತಿದ್ದಾರೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇದರ ವಿರುದ್ದ ಹೋರಾಟ ನಡೆಸಲಾಗುವದು ಎಂದು ತಿಳಿಸಿದರು.