ಮಡಿಕೇರಿ, ಫೆ. 5: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿಲ್ಲೆಯ ವೀರಾಜಪೇಟೆ, ಸೋಮವಾರಪೇಟೆ ತಾಲೂಕಿನ ಗಿರಿಜನ ಹಾಡಿ ಕುಟುಂಬಗಳಿಗೆ ಅರಣ್ಯ ಹಕ್ಕು ಕಾಯ್ದೆಯ ನಿರ್ದೇಶನದಂತೆ ಅರಣ್ಯ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅರಣ್ಯ, ಗಿರಿಜನ ಸಮಗ್ರ ಅಭಿವೃದ್ಧಿ ಹಾಗೂ ಕಂದಾಯ ಇಲಾಖೆಗಳು ಕೈಜೋಡಿಸಿ ಕಾರ್ಯ ನಿರ್ವಹಿಸಬೇಕು. ಅರಣ್ಯ ಹಕ್ಕು ಸೌಲಭ್ಯಕ್ಕಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿ.ಪಂ. ಸದಸ್ಯರು ಹಾಗೂ ಸಮಿತಿ ನಾಮ ನಿರ್ದೇಶಕ ಸದಸ್ಯರು ಯಡವನಾಡು, ಕಟ್ಟೆಹಾಡಿ, ಗೋಣಿಗದ್ದೆ, ಬೊಮ್ಮಾಡು ದೇವರಪುರ ಮತ್ತಿತರ ಹಾಡಿಗಳಲ್ಲಿನ ಗಿರಿಜನರಿಗೆ ತ್ವರಿತವಾಗಿ ಅರಣ್ಯ ಹಕ್ಕುಪತ್ರ ನೀಡುವದರ ಜತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಸಾಕಷ್ಟು ಗಿರಿಜನರು ಕಾಡಿನಲ್ಲಿ ವಾಸಿಸುತ್ತ ಜೀವನ ದೂಡುತ್ತಿದ್ದಾರೆ, ಮುಖ್ಯವಾಗಿ ಶಿಕ್ಷಣ, ಆರೋಗ್ಯ, ವಿದ್ಯುತ್, ರಸ್ತೆ, ಬಸ್ ಮತ್ತಿತರ ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇಂತಹ ಆದಿವಾಸಿ ಕುಟುಂಬಗಳಿಗೆ ಅರಣ್ಯ ಹಕ್ಕು ಕಾಯ್ದೆಯಂತೆ ಮೂಲ ಸೌಲಭ್ಯಗಳನ್ನು ತಲಪಿಸುವಂತೆ ಸೂಚನೆ ನೀಡಿದರು.

ಸಮಿತಿ ಸದಸ್ಯೆ ಪಂಕಜ ಅವರು ಜಿಲ್ಲೆಯಲ್ಲಿ ಸಾಕಷ್ಟು ಆದಿವಾಸಿ ಕುಟುಂಬಗಳಿಗೆ ವೈಯಕ್ತಿಕ ಮತ್ತು ಸಮುದಾಯ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕಿದೆ ಎಂದು ಮನವಿ ಮಾಡಿದರು.

ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್ ಅವರು ಅರಣ್ಯ ಹಕ್ಕು ಕಾಯ್ದೆಯಡಿ ಬಾಕಿ ಇರುವ ಕ್ಲೇಮುಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಲ್ಲಿ ಕ್ರಮವಹಿಸಬೇಕು ಎಂದರು. ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.