ಮಡಿಕೇರಿ, ಫೆ. 5: ದಡಾರ ಮತ್ತು ರುಬೆಲ್ಲಾ ನಿಯಂತ್ರಣ ಅಭಿಯಾನ ಕಾರ್ಯಪಡೆ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅಧ್ಯಕ್ಷತೆಯಲ್ಲಿ ನಡೆಯಿತು.

ದಡಾರ ಮತ್ತು ರುಬೆಲ್ಲಾ ರೋಗವನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಆ ದಿಸೆಯಲ್ಲಿ ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ ಮಾತನಾಡಿ, ದಡಾರ-ರುಬೆಲ್ಲಾ ನಿಯಂತ್ರಣ ಅಭಿಯಾನ ತಾ. 7 ರಿಂದ 28 ರವರೆಗೆ 21 ದಿನಗಳ ಕಾಲ 9 ತಿಂಗಳಿಂದ 15 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ದಡಾರ ರುಬೆಲ್ಲಾ ಮುಕ್ತ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಅಭಿಯಾನ ಆಯೋಜಿಸಿದ್ದು, ಆ ನಿಟ್ಟಿನಲ್ಲಿ 9 ತಿಂಗಳಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ದಡಾರ ರುಬೆಲ್ಲಾ ನಿಯಂತ್ರಣ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.

ಆರ್‍ಸಿಹೆಚ್ ಅಧಿಕಾರಿ ಡಾ. ನಿಲೇಶ್ ಮಾತನಾಡಿ, 9 ತಿಂಗಳಿನಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುವದರ ಮೂಲಕ ಸಮುದಾಯದಲ್ಲಿ ದಡಾರ ಮತ್ತು ರುಬೆಲ್ಲಾ ನಿಯಂತ್ರಣಕ್ಕೆ ಮುಂದಾಗಲಾಗಿದೆ.

ಎಲ್ಲಾ ಸರ್ಕಾರಿ ಅನುದಾನಿತ, ಖಾಸಗಿ ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ, ಆರೋಗ್ಯ ಉಪ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ದಡಾರ ರುಬೆಲ್ಲಾ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 1.29 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಚುಚ್ಚುಮದ್ದು ಮಾದರಿಯಲ್ಲಿ ಲಸಿಕೆಯನ್ನು ನೀಡಲಾಗುತ್ತದೆ ಎಂದು ನಿಲೇಶ್ ತಿಳಿಸಿದರು.

ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ: ತಾ. 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆ ಪಡೆಯುವಂತಾಗಲು ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ ತಿಳಿಸಿದರು.

1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಶಾಲೆ ಮತ್ತು ಅಂಗನವಾಡಿಗಳಲ್ಲಿ ಜಂತುಹುಳ ನಿವಾರಣಾ ಮಾತ್ರೆಯನ್ನು ಉಚಿತವಾಗಿ ನೀಡಲಾಗುವದು.

ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಸಹ ಜಂತುಹುಳ ಮಾತ್ರೆ ನೀಡಲಾಗುವದು. ಆದ್ದರಿಂದ ಜಂತುಹುಳ ನಿವಾರಣಾ ಕಾರ್ಯಕ್ರಮಕ್ಕೆ ಕೈಜೋಡಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಂತುಹುಳ ಬಾಧಿತ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಜೊತೆಗೆ ಸುಸ್ತು, ನಿಶ್ಯಕ್ತಿ ಹೆಚ್ಚಾಗಿರುತ್ತದೆ. ಹಾಗೆಯೇ ಮಕ್ಕಳ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ತುಂಬಾ ಕುಂಠಿತವಾಗಿರುತ್ತದೆ. ಆದ್ದರಿಂದ ಜಂತುಹುಳ ನಿವಾರಣಾ ಮಾತ್ರೆ ಪಡೆಯುವಂತೆ ಡಾ. ನಿಲೇಶ್ ಮನವಿ ಮಾಡಿದರು.

ಜಂತುಹುಳು ನಿಯಂತ್ರಣಕ್ಕೆ ವೈಯಕ್ತಿಕ ಸ್ವಚ್ಛತೆ ಬಹುಮುಖ್ಯವಾಗಿದೆ. ಉಗುರುಗಳನ್ನು ಸ್ವಚ್ಛವಾಗಿಡಬೇಕು. ಸುತ್ತಮುತ್ತಲಿನ ಪರಿಸರ ಶುಚಿಯಾಗಿರಬೇಕು. ಶುದ್ದವಾದ ನೀರನ್ನು ಕುಡಿಯಬೇಕು.

ಬಯಲಿನಲ್ಲಿ ಮಲ-ಮೂತ್ರ ವಿಸರ್ಜನೆ ಮಾಡಬಾರದು. ಹಣ್ಣು ಮತ್ತು ತರಕಾರಿಗಳನ್ನು ಸ್ವಚ್ಛವಾದ ನೀರಿನಿಂದ ತೊಳೆಯಬೇಕು. ಈ ರೀತಿ ವೈಯಕ್ತಿಕ ಸ್ವಚ್ಛತೆ ಕಡೆ ಹೆಚ್ಚಿನ ಗಮನಹರಿಸಬೇಕಿದೆ ಎಂದು ಅವರು ಮನವಿ ಮಾಡಿದರು.

ಜಿ.ಪಂ. ಸಿಇಓ ಚಾರುಲತಾ ಸೋಮಲ್ ಹಲವು ಸಲಹೆ, ನಿರ್ದೇಶನ ನೀಡಿದರು. ಡಿಡಿಪಿಐ ಬಸವರಾಜು ಇತರರು ಇದ್ದರು.