ಮಡಿಕೇರಿ, ಫೆ.9: ಕ್ರೀಡೆಗೆ ವಯಸ್ಸಿನ ಮಿತಿಯಿಲ್ಲ. ದೇಹ ಸ್ಥಿತಿ ಉತ್ತಮವಾಗಿರಲು ಕ್ರೀಡೆ ಪ್ರಮುಖವಾಗಿದೆ. ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಾಗಿರಲು ಕ್ರೀಡೆ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ. ಮಹಾಸ್ವಾಮೀಜಿ ಹೇಳಿದರು. ಪೊಲೀಸ್ ಇಲಾಖೆ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತಿಹಾಸದ ಪುಟ ತಿರುಗಿ ನೋಡಿದರೆ ಗ್ರೀಸ್, ರೋಮ್ ಮುಂತಾದ ದೇಶಗಳು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿವೆ. ಕ್ರೀಡೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನಮ್ಮ ದೇಶದಲ್ಲೂ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದರು. ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ, ಪೊಲೀಸರು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು, ಪೊಲೀಸರು ದಿನದ 24 ಗಂಟೆ ಕೆಲಸ ಮಾಡುತ್ತಾರೆ. ಈ ಒತ್ತಡದಿಂದ ಹೊರಬರಲು, ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಿದ್ಧರಿರಲು ಕ್ರೀಡೆ ಸಹಕಾರಿಯಾಗಿದೆ. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ತಾ.11 ರವರೆಗೆ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನಡೆಯಲಿದೆ ಎಂದರು.

2015ರ ಸಾಲಿನ ವೈಯಕ್ತಿಕ ಚಾಂಪಿಯನ್ ಆದ ಪೊಲೀಸ್ ಸಿಬ್ಬಂದಿ ಗಿರೀಶ್ ಎಂ.ಎನ್. ಅವರು ಕ್ರೀಡಾ ಜ್ಯೋತಿಯನ್ನು ಮುನ್ನಡೆಸಿ ದರು. ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ನಿವೃತ್ತ ಪೊಲೀಸ್ ಅಧಿಕಾರಿಗಳು ಇತರರು ಇದ್ದರು. ಎಂ.ಎಸ್. ಲೋಕೇಶ್ ನಿರೂಪಿಸಿದರು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‍ಪಿ ಸಂಪತ್‍ಕುಮಾರ್ ವಂದಿಸಿದರು.