ಸೋಮವಾರಪೇಟೆ, ಫೆ.11: ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಪರೀಕ್ಷೆ, ಫಲಿತಾಂಶ ಹಾಗೂ ಅಂಕಪಟ್ಟಿ ವಿತರಣೆಯಲ್ಲಿ ಗೊಂದಲ ಉಂಟಾಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ. ತಕ್ಷಣ ಈ ಎಲ್ಲಾ ಗೊಂದಲಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಸದಸ್ಯರುಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ವಿವೇಕಾನಂದ ವೃತ್ತದಿಂದ ಕ್ಲಬ್‍ರಸ್ತೆ ಮೂಲಕ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಜೇಸೀ ವೇದಿಕೆ ಬಳಿ ಮಾನವ ಸರಪಳಿ ರಚಿಸಿ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಘಟಕದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯ ದಲ್ಲಿ ನಡೆಯುತ್ತಿರುವ ಪರೀಕ್ಷೆಯ ಗೊಂದಲ, ಫಲಿತಾಂಶಗಳ ಗೊಂದಲ ಮತ್ತು ಅಂಕಪಟ್ಟಿ ವಿತರಣೆಯಲ್ಲಿ ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಚೆಲ್ಲಾಟವಾಡುತ್ತಿದೆ. ಈ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರನ್ನು ವಜಾಗೊಳಿಸಿ, ಸೂಕ್ತ ವ್ಯಕ್ತಿಯನ್ನು ನೇಮಕಗೊಳಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ತಾಲೂಕು ಸಂಘಟನಾ ಕಾರ್ಯದರ್ಶಿ ವಿಜೇತ್ ಆಗ್ರಹಿಸಿದರು.
ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸುವದಾಗಿ ಎಚ್ಚರಿಕೆ ನೀಡಿದರು. ನಂತರ ವಿದ್ಯಾರ್ಥಿಗಳು ಇಲ್ಲಿನ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ತಾಲೂಕು ಸಂಚಾಲಕ ದರ್ಶನ್, ಮುಖಂಡರಾದ ಲಿಖಿತ್, ಅಭಿಲಾಷ್, ದೀಕ್ಷಿತ್, ಯಶ್ವಂತ್, ದಿವ್ಯ, ಸುರಭಿ ಸೇರಿದಂತೆ ಇತರರು ಭಾಗವಹಿಸಿದ್ದರು.