ಮಡಿಕೇರಿ, ಫೆ. 16: ಕೊಡಗು ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಕ್ಷಯರೋಗ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ತಾ. 18ರಂದು (ನಾಳೆ) ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಕೊಡಗು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಕ್ಷಯರೋಗ ಸಮನ್ವಯಾಧಿಕಾರಿ ಎ.ಸಿ. ಶಿವಕುಮಾರ್ ಮಾಹಿತಿ ನೀಡಿದರು.
ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2025ರೊಳಗೆ ಕ್ಷಯರೋಗವನ್ನು ದೇಶದಿಂದಲೇ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಸಂಕಲ್ಪ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಪ್ರಥಮ ಸಮ್ಮೇಳನವನ್ನು ಕೊಡಗು ಜಿಲ್ಲೆಯಲ್ಲಿ ಆಯೋಜಿಸುವದರೊಂದಿಗೆ ಕ್ಷಯರೋಗ ನಿರ್ಮೂಲನೆಗೆ ಪಣ ತೊಡಲಾಗುವದು. ಇದೀಗ ವಾರಕ್ಕೆ ಮೂರು ದಿನದಂತೆ ಮಾತ್ರೆ ತೆಗೆದುಕೊಳ್ಳುವದರೊಂದಿಗೆ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿ ದ್ದಾರೆ. ಮುಂದಿನ ಏಪ್ರಿಲ್‍ನಿಂದ ದಿನಂಪ್ರತಿ ಮಾತ್ರೆ ತೆಗೆದುಕೊಳ್ಳುವ ಚಿಕಿತ್ಸೆಗೆ ಚಾಲನೆ ನೀಡಲಾಗುತ್ತದೆ. ದೇಶದ 5 ರಾಜ್ಯಗಳಲ್ಲಿ ಈ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಚಾಲನೆಗೆ ತರಲಾಗುತ್ತಿದೆ. ಬಳಿಕ ಮುಂದಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲಿ ಚಾಲನೆಗೆ ತರಲಾಗುತ್ತಿದೆ ಎಂದು ಹೇಳಿದರು. ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು - ಕ್ಷಯ ವಿಭಾಗ, ಪರಿಷ್ಕøತ ರಾಷ್ಟ್ರೀಯ ನಿಯಂತ್ರಣ ಕಾರ್ಯಕ್ರಮ ಮತ್ತು ಮಡಿಕೇರಿ ಕೊಡಗು ವೈದ್ಯಕೀಯ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಕ್ಷಯರೋಗ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್, ಜಂಟಿ ನಿರ್ದೇಶಕ (ಕ್ಷಯ) ಡಾ.ಕೆ.ಬಿ. ಮುತ್ತಪ್ಪ, ಕೊಡಗು ವೈದ್ಯಕೀಯ ಮಹಾ ವಿದ್ಯಾಲಯದ ನಿರ್ದೇಶಕ ಡಾ. ಮಹೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಒ. ಆರ್. ಶ್ರೀರಂಗಪ್ಪ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.
ಸಮ್ಮೇಳನದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕ್ಷಯರೋಗ ನಿಯಂತ್ರ ಣಾಧಿಕಾರಿಗಳು, ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿ ರುವ ವೈದ್ಯಾಧಿಕಾರಿಗಳು, ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ರುಗಳು ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ಕ್ಷಯರೋಗ ನಿಯಂತ್ರಣ ಮತ್ತು ಸಂಶೋಧನೆಗಳ ಬಗ್ಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯ ಕ್ರಮವನ್ನು ಆಯೋಜಿಸಲಾಗಿದೆ. ಕ್ಷಯರೋಗದ ಬಗ್ಗೆ ಉಪನ್ಯಾಸ ನೀಡಲು ವಿಶ್ವ ಆರೋಗ್ಯ ಸಂಸ್ಥೆಯ ಕ್ಷಯರೋಗ ಸಲಹೆಗಾರರಾದ ಏನಪೋಯ ವೈದ್ಯಕೀಯ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ದೀಪು, ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಅರುಣ್, ಜೆಎಸ್‍ಎಸ್ ವೈದ್ಯಕೀಯ ಮಹಾವಿದ್ಯಾಲಯದ ಶ್ವಾಸಕೋಶ ರೋಗಗಳ ವಿಭಾಗದ ಮುಖ್ಯಸ್ಥ ಡಾ. ಜಯರಾಜ್, ವೈದೇಹಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ರವೀಂದ್ರ ರೆಡ್ಡಿ, (ಕ್ಷಯ) ಉಪನಿರ್ದೇಶಕ ಡಾ. ಅನಿಲ್ ಎಸ್., ಹಿರಿಯ ತಜ್ಞೆ ಡಾ. ನಿರ್ಮಲ ಭಾಗವಹಿಸಿ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭ ಕೊಡಗು ವೈದ್ಯಕೀಯ ಮಹಾವಿದ್ಯಾಲಯದ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ರಾಮಚಂದ್ರ ಕಾಮತ್ ಇದ್ದರು.