ಸೋಮವಾರಪೇಟೆ, ಫೆ. 17: ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಕಾಂಗ್ರೆಸ್ ಬೆಂಬಲಿತ ಸದಸ್ಯ ರಮೇಶ್ ಅವರು ಅಧ್ಯಕ್ಷರಾದ ನಂತರ ಕಾಂಗ್ರೆಸ್ ನಾಯಕರಲ್ಲಿ ನಡೆಯುತ್ತಿರುವ ಮುಸುಕಿನ ಗುದ್ದಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ಬೇಸತ್ತ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಅಧ್ಯಕ್ಷ ಎಂ.ಡಿ. ರಮೇಶ್, ತಾನು ಅಧ್ಯಕ್ಷನಾಗಿ ಆಯ್ಕೆಯಾದ ನಂತರ ಕಾಂಗ್ರೆಸ್ ಮುಖಂಡರಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯ, ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ವಿದ್ಯಮಾನಗಳಿಂದ ಬೇಸತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವದಾಗಿ ತಿಳಿಸಿದ್ದಾರೆ.

ತಾ. 9 ರಂದು ನಡೆದ ಚುನಾವಣೆಯಲ್ಲಿ ತಾನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಹಿತೈಷಿಗಳೊಂದಿಗೆ ಚರ್ಚಿಸಿ ಎಲ್ಲರ ಬೆಂಬಲದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಆಯ್ಕೆಯಾದ ಕಾಂಗ್ರೆಸ್ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಸದಸ್ಯರಲ್ಲೂ ಮತಯಾಚನೆ ಮಾಡಿದ್ದೆ. ಅದರಂತೆ ತಾನು ಅಧಿಕ ಮತಗಳಿಸಿ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಲಿತ ವರ್ಗಕ್ಕೆ ಸೇರಿದ ತಾನು ಎಪಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಏರಿರುವದನ್ನು ಸಹಿಸದ ಕೆಲವು ಕಾಂಗ್ರೆಸ್ ಮುಖಂಡರು, ಪಕ್ಷದ ಇತರ ನಾಯಕರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಪಕ್ಷದ ರಾಜ್ಯ ಮುಖಂಡರಿಗೂ ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಇದರೊಂದಿಗೆ ಪಕ್ಷದ ಹಿತಕ್ಕೆ ಧಕ್ಕೆಯಾಗುವಂತಹ ವಾತಾವರಣ ನಿರ್ಮಾಣಮಾಡುತ್ತಿದ್ದು, ಇದರಿಂದ ಬೇಸತ್ತು ರಾಜೀನಾಮೆಗೆ ಮುಂದಾಗಿರುವದಾಗಿ ತಿಳಿಸಿದ್ದಾರೆ.

ತಮ್ಮ ಆಯ್ಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವದೇ ಹಾನಿಯಾಗಬಾರದು. ಚುನಾವಣೆ ಸಮೀಪಿಸುತ್ತಿರುವದರಿಂದ ಮುಖಂಡರುಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಬಾರದು ಎಂಬ ಕಾರಣಕ್ಕೆ ಸಂಬಂಧಿಸಿದ ಇಲಾಖೆಗೆ ತನ್ನ ರಾಜೀನಾಮೆಯನ್ನು ಸಲ್ಲಿಸಲು ನಿರ್ಧರಿಸಿರುವದಾಗಿ ಎಂ.ಡಿ. ರಮೇಶ್ ತಿಳಿಸಿದ್ದಾರೆ.