ವೀರಾಜಪೇಟೆ, ಫೆ. 19: ಕಾಲೇಜು ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನವನ್ನು ಮಾಡಬೇಕೆಂದು ಕೂಡಿಗೆ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಪ್ರಕಾಶ್ ಅಭಿಪ್ರಾಯಪಟ್ಟರು. ಸಮೀಪದ ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನ ಮಾಡುವದರಿಂದ ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡು ಅಧ್ಯಯನದಲ್ಲಿ ಪಕ್ವತೆಯನ್ನು ಬೆಳೆಸಿಕೊಳ್ಳಬಹುದೆಂದು ಹೇಳಿದರು. ಇದೇ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ಬಿ.ಎ. ವಿಭಾಗದಲ್ಲಿ ರ್ಯಾಂಕನ್ನು ಪಡೆದ ಪಾಲಿಬೆಟ್ಟ ಕಾಲೇಜಿನ ಹಳೆಯ ವಿದ್ಯಾರ್ಥಿನಿ ಹೆಚ್.ಬಿ ಅಶ್ವಿನಿಯವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಕುಟ್ಟಂಡ ವಸಂತ್ ಅತಿಥಿಯಾಗಿ ಆಗಮಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ.ಎಂ. ಭವಾನಿ ವಹಿಸಿದ್ದರು. ವಿದ್ಯಾರ್ಥಿನಿ ಆಯಿಷಾ ಕೆ. ಎಸ್. ಸ್ವಾಗತಿಸಿದರು. ವಿದ್ಯಾರ್ಥಿನಿ ಆಯಿಷಾ ಎಂ.ಎಂ. ಕಾರ್ಯಕ್ರಮ ನಿರೂಪಿಸಿದರು ಹಾಗೂ ವಿದ್ಯಾರ್ಥಿನಿ ಹಫೀನ ವಂದಿಸಿದರು.