ಸೋಮವಾರಪೇಟೆ, ಫೆ. 19: ಚೌಡ್ಲು ಪಂಚಾಯಿತಿ ವ್ಯಾಪ್ತಿಯ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಕಸದ ರಾಶಿ ತುಂಬಿ ತುಳುಕುತ್ತಿದ್ದು ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಇಲ್ಲಿನ ನಿವಾಸಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಹಲವಾರು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸುವ ಪಂಚಾಯಿತಿ ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಬಡಾವಣೆಯಲ್ಲಿ ಕಸದ ರಾಶಿ ತುಂಬಿ ತುಳುಕುತ್ತಿದ್ದು, ಇದನ್ನು ವಿಲೇವಾರಿ ಮಾಡುವಲ್ಲಿ ಪಂಚಾಯಿತಿ ಆಡಳಿತ ಮಂಡಳಿ ವಿಫಲಗೊಂಡಿದೆ. ಕಸವನ್ನು ಸಾಗಿಸಲು ಆಟೋ ವ್ಯವಸ್ಥೆ ಇದ್ದರೂ ಅದನ್ನು ಬಳಸಿಕೊಳ್ಳುತ್ತಿಲ್ಲ. ನಿರ್ವಹಣೆ ವೆಚ್ಚವನ್ನು ನಮೂದಿಸುತ್ತಾರೆ. ಮುಂದಿನ ಎರಡು ದಿನಗಳೊಳಗಾಗಿ ಸಮಸ್ಯೆಯನ್ನು ಇತ್ಯರ್ಥಗೊಳಿಸದಿದ್ದಲ್ಲಿ ಬಡಾವಣೆಯ ಎಲ್ಲಾ ನಿವಾಸಿಗಳು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವದು ಎಂದು ಇಲ್ಲಿನ ನಿವಾಸಿ ವಕೀಲ ಭರತ್ ಭೀಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭ ದೀಪಕ್ ಕಾವೇರಪ್ಪ, ನಂದಕುಮಾರ್, ಶರತ್, ಕೆ.ಸಿ. ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.