ಸೋಮವಾರಪೇಟೆ, ಫೆ. 27: ಕಾಂಗ್ರೆಸ್ ಸರ್ಕಾರದ ಹಲವು ಸಚಿವರು ಕಾಂಗ್ರೆಸ್ ಹೈಕಮಾಂಡ್‍ಗೆ ಕೋಟ್ಯಾಂತರ ರೂಪಾಯಿ ಕಪ್ಪ ನೀಡುವ ಮೂಲಕ ರಾಜ್ಯವನ್ನು ಕೊಳ್ಳೆ ಹೊಡೆದಿದ್ದಾರೆ ಎಂದು ಆರೋಪಿಸಿ, ತಕ್ಷಣ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ನಂತರ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದರು.ಡೈರಿ ಮೂಲಕ ರಾಜ್ಯ ಸರ್ಕಾರದ ಕಾಂಗ್ರೆಸ್ ಮುಖಂಡರ ಬಣ್ಣ ಬಯಲಾಗಿದೆ. ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇದರೊಂದಿಗೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಅಧಿಕಾರಕ್ಕಾಗಿ ಕಪ್ಪ ನೀಡಿರುವ ಸರ್ಕಾರದ ಸಚಿವರನ್ನು ವಜಾಗೊಳಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ, ಜಿಲ್ಲಾ ಬಿಜೆಪಿ ವಕ್ತಾರ ಅಭಿಮನ್ಯುಕುಮಾರ್ ಆಗ್ರಹಿಸಿದರು. ಈ ಸಂಬಂಧಿತ ಮನವಿಯನ್ನು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಬ್ಬೆಟ್ಟ ಮಧು, ಪಕ್ಷದ ಜಿಲ್ಲಾ ಕಾರ್ಯದರ್ಶಿ ಮನುಕುಮಾರ್ ರೈ, ನಗರಾಧ್ಯಕ್ಷ ಸೋಮೇಶ್, ಪದಾಧಿಕಾರಿಗಳಾದ ಮಸಗೋಡು ಸತೀಶ್, ಶರತ್, ಧರ್ಮ, ರಾಜಾರಾವ್, ಜಗದೀಶ್, ಶಿವಪ್ಪ, ಪಿ. ಮಧು, ಶ್ರೀಕಾಂತ್ ಸೇರಿದಂತೆ ಇತರರು ಭಾಗವಹಿಸಿದ್ದರು.