ಪೊನ್ನಂಪೇಟೆ, ಮಾ. 1: ಪೊನ್ನಂಪೇಟೆಯ ಸಾಯಿಶಂಕರ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಜ್ಯೋತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪದವಿ, ದ್ವಿತೀಯ ಪಿಯುಸಿ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೀಡಲಾಯಿತು.

ಪೊನ್ನಂಪೇಟೆ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಬೋಧಾನಂದ ಸ್ವರೂಪ ಸ್ವಾಮಿ ದಿವ್ಯ ಸಾನಿಧ್ಯ ವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ಇರುವ ಸುಪ್ತ ಪ್ರತಿಭೆಯನ್ನು ಶಿಕ್ಷಣದಲ್ಲಿ ತೋರಿಸಬೇಕು ಹಾಗೂ ಸಮಾಜದಲ್ಲಿ ದಾರಿ ದೀಪವಾಗಿರಬೇಕು. ಜೀವನದಲ್ಲಿ ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು ಎಂದು ಅವರು ಅಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿಯ ಅಧಕ್ಷ ಶಶಿ ಸುಬ್ರಮಣಿ ವಿದ್ಯಾರ್ಥಿಗಳು ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಸಾಯಿಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೊಳೇರ ಝರು ಗಣಪತಿ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಬೀರೇಗೌಡ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.