ಸೋಮವಾರಪೇಟೆ, ಮಾ. 7: ಕೊಡಗು ಜಿಲ್ಲಾ ಭಾರತೀಯ ಜನತಾ ಪಕ್ಷದಲ್ಲಿ ದಿಢೀರ್ ಬೆಳವಣಿಗೆ ನಡೆದಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ ಯುವ ಮುಖಂಡ ಬಿ.ಬಿ. ಭಾರತೀಶ್ ನೇಮಕಗೊಂಡಿದ್ದಾರೆ.
ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನು ಬದಲಾಯಿಸುವ ಬಗ್ಗೆ ಭಾರೀ ಚರ್ಚೆ ನಡೆದಿದ್ದು, ಮನುಮುತ್ತಪ್ಪ ಅವರನ್ನು ಪದಚ್ಯುತಿಗೊಳಿಸಿ ಯುವ ನಾಯಕ ಜಿ.ಪಂ. ಮಾಜಿ ಸದಸ್ಯ ಬಿ.ಬಿ. ಭಾರತೀಶ್ ಅವರನ್ನು ನೇಮಕಗೊಳಿಸುವ ಬಗ್ಗೆ ಮುಖಂಡರು ಒಲವು ತೋರಿಸಿದ್ದಾರೆಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ಮನು ಮುತ್ತಪ್ಪ ಅವರನ್ನು ಮನಃಪೂರ್ವಕವಾಗಿ ಒಪ್ಪಿಕೊಳ್ಳದ ಮುಖಂಡರ ದಂಡು ಇಂದು ಬೆಂಗಳೂರಿನಲ್ಲಿ ರಾಜ್ಯ ಮುಖಂಡರನ್ನು ಭೇಟಿಯಾಗಿ ಅಧ್ಯಕ್ಷ ಸ್ಥಾನದಿಂದ ಇವರನ್ನು ಬದಲಾಯಿಸುವಂತೆÀ ಒತ್ತಡ ತಂದಿದ್ದರು.
ಜಿಲ್ಲೆಯ ಶಾಸಕದ್ವಯರೂ ಸೇರಿದಂತೆ ಬಿಜೆಪಿ ನಾಯಕರ ಸಮಕ್ಷಮದಲ್ಲಿ ಪರ ವಿರೋಧ ಚರ್ಚೆಗಳು ನಡೆದು ಅಂತಿಮವಾಗಿ ಮನು ಮುತ್ತಪ್ಪ ಅವರನ್ನು ಬದಲಾಯಿಸಿ ಬಿಜೆಪಿ ಯುವ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷರಾಗಿದ್ದ, ಸುಂಟಿಕೊಪ್ಪ ಕ್ಷೇತ್ರದಿಂದ ಈ ಹಿಂದೆ ಜಿ.ಪಂ. ಪ್ರವೇಶಿಸಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ಬಿ.ಬಿ. ಭಾರತೀಶ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.(ಮೊದಲ ಪುಟದಿಂದ) ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ ಬೆಳವಣಿಗೆ ನಡೆದಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಕಾರ್ಯದರ್ಶಿ ರವಿಕುಮಾರ್, ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚುರಂಜನ್, ಮಾಜಿ ಎಂಎಲ್ಸಿ ಎಸ್.ಜಿ. ಮೇದಪ್ಪ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುಜಾ ಕುಶಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮನು ಮುತ್ತಪ್ಪ, ಪ್ರಮುಖರಾದ ಗಿರೀಶ್ ಮಲ್ಲಪ್ಪ ಸೇರಿದಂತೆ ಇತರ ಮುಖಂಡರು ಭಾಗವಹಿಸಿದ್ದರು ಎನ್ನಲಾಗಿದೆ.
ತೀರ್ಮಾನಕ್ಕೆ ಬದ್ಧ : ಕೆ.ಜಿ. ಬೋಪಯ್ಯ
ಕೊಡಗು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರ ಬದಲಾವಣೆಯ ಬಗ್ಗೆ ಚರ್ಚೆ ನಡೆದಿದೆ. ಪಕ್ಷ ಮತ್ತು ರಾಜ್ಯಾಧ್ಯಕ್ಷರ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಅಭಿಪ್ರಾಯ ಕೇಳಿದ್ದಾರೆ : ರಂಜನ್
ಪಕ್ಷದ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡುವದರ ಬಗ್ಗೆ ನಮ್ಮ ಅಭಿಪ್ರಾಯ ಕೇಳಿದ್ದಾರೆ. ಈಗಿನ ಅಧ್ಯಕ್ಷರು ಸಮರ್ಥವಾಗಿ ಪಕ್ಷವನ್ನು ಮುನ್ನಡೆಸುತ್ತಿರುವ ಬಗ್ಗೆ ತಿಳಿಸಿದ್ದೇವೆ. ಬದಲಾವಣೆ ಮಾಡುವದಾದರೆ ಈಗಿನ ಅಧ್ಯಕ್ಷರಿಗೆ ಉನ್ನತ ಸ್ಥಾನಮಾನ ನೀಡುವಂತೆ ಕೋರಿದ್ದೇವೆ. ರಾಜ್ಯಾಧ್ಯಕ್ಷರು ಒಪ್ಪಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ 2-3 ಮಂದಿಯ ಹೆಸರಿದೆ. ಅಧ್ಯಕ್ಷರ ನೇಮಕವನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದರು.
ಪಕ್ಷ ತೀರ್ಮಾನ ಒಪ್ಪಿಕೊಳ್ಳಲೇಬೇಕು: ಸುನಿಲ್
ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯ ಬಗ್ಗೆ ಯಾವದೇ ಮಾಹಿತಿಯಿಲ್ಲ. ಪಕ್ಷದ ಜಿಲ್ಲಾಧ್ಯಕ್ಷರ ಬದಲಾವಣೆಯನ್ನು ರಾಜ್ಯ ಬಿಜೆಪಿ ಬಯಸಿದರೆ, ತೀರ್ಮಾನವನ್ನು ಒಪ್ಪಿಕೊಳ್ಳಲೇಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ತಿಳಿಸಿದರು.