ಶ್ರೀಮಂಗಲ, ಮಾ. 7: ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರ ಸಮಸ್ಯೆ ಪರಿಹರಿಸಲು ಮತ್ತೆ ಕೇಂದ್ರ ಸರಕಾರದ ಗಮನ ಸೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವದೆಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿ.ಜೆ.ಪಿ. ಕಚೇರಿಯಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಬೆಳೆಗಾರ ಸಂಘಟನೆಗಳಿಗೆ ಅವರು ಈ ಭರವಸೆ ನೀಡಿ, ಕಾಫಿ ಬೆಳೆಗಾರರ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸುವದ ರೊಂದಿಗೆ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮ್ ಅವರೊಂದಿಗೆ ಚರ್ಚಿಸಿ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುವದಾಗಿ ತಿಳಿಸಿದರು.
ಇತ್ತೀಚೆಗೆ ಮೈಸೂರಿನಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಭೇಟಿ ಮಾಡಿ ಕೊಡಗು ಜಿಲ್ಲಾ ಬೆಳೆಗಾರ ಒಕ್ಕೂಟದ ನಿಯೋಗ, ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಪರಿಹರಿಸಲು ಮನವಿ ಮಾಡಿತ್ತು.
ದೆಹಲಿಗೆ 2015ರಲ್ಲಿ ಒಕ್ಕೂಟದ ನಿಯೋಗ ತೆರಳಿ ಹಣಕಾಸು, ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಕಾಫಿ ಬೆಳೆಗಾರರ ಸಂಕಷ್ಟದ ಪರಿಸ್ಥಿತಿಯ ಬಗ್ಗೆ ಗಮನ ಸೆಳೆದಿದ್ದರೂ ತದ ನಂತರ 3 ಬಜೆಟ್ ಆದರೂ ಯಾವದೇ ಪರಿಹಾರ ಪ್ರಕಟವಾಗದೇ ಇರುವ ಬಗ್ಗೆ ಗಮನ ಸೆಳೆಯಲಾಗಿತ್ತು. ರಾಜ್ಯದ ಕಾಫಿ ಬೆಳೆಗಾರರ ಎಲ್ಲಾ ಸಂಘಟನೆ ಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಕೇಂದ್ರದ ಗಮನ ಸೆಳೆಯುವಂತೆ ಒಕ್ಕೂಟ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕ ಮಗಳೂರು, ಹಾಸನ ಜಿಲ್ಲೆಯ ಕಾಫಿ ಬೆಳೆಗಾರರ ಸಂಘಟನೆಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವ ಭರವಸೆಯನ್ನು ಸಂಸದ ಪ್ರತಾಪ್ ಸಿಂಹ ನೀಡಿದ್ದರು.
ಈ ಸಂದರ್ಭ ಕಳೆದ 2 ದಶಕದಿಂದ ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರೀತ್ಯ, ಬರಗಾಲ, ಮಾರುಕಟ್ಟೆ ಕುಸಿತ, ಪಸಲು ಕುಂಠಿತ, ಕಾರ್ಮಿಕರ ಕೊರತೆ, ಉತ್ಪಾದನಾ ವೆಚ್ಚ ಹೆಚ್ಚಳ ಇತ್ಯಾದಿ ಸಮಸ್ಯೆಗಳಿಂದ ಕಾಫಿ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಕಾಫಿ ಬೆಳೆಗಾರರ ಎಲ್ಲಾ ಬ್ಯಾಂಕ್ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಿ, ಪುನಶ್ಚೇತನಕ್ಕೆ ಶಾಶ್ವತವಾದ ವಿಶೇಷ ಪ್ಯಾಕೇಜ್ ಪ್ರಕಟಿಸುವಂತೆ ಮನವಿ ಮಾಡಿದರು.ಈ ಸಂದರ್ಭ ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಸಿ.ಟಿ.ರವಿ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಜಯರಾಮ್, ಉಪಾಧ್ಯಕ್ಷ ರತೀಶ್, ಕೊಡಗು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಅಜ್ಜಮಾಡ ಶಂಕರು ನಾಚಪ್ಪ, ಕಾರ್ಯದರ್ಶಿ ಅಣ್ಣೀರ ಹರೀಶ್ ಮಾದಪ್ಪ, ಖಜಾಂಚಿ ಮಾಣೀರ ವಿಜಯ್ ನಂಜಪ್ಪ, ಸಲಹೆಗಾರ ಚೆಪ್ಪುಡಿರ ಶೆರಿ ಸುಬ್ಬಯ್ಯ, ನಿರ್ದೇಶಕ ಕೈಬುಲೀರ ಎಂ. ಹರೀಶ್, ಮಾಜಿ ಕಾರ್ಯದರ್ಶಿ ಜಮ್ಮಡ ಮೋಹನ್ ಮಾದಪ್ಪ, ಬೆಳೆಗಾರರ ಸಂಘದ ನಂದಾ ಬೆಳ್ಯಪ್ಪ, ವಿಶ್ವನಾಥ್, ಹಾಸನ ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಬಿ. ಕೃಷ್ಣಪ್ಪ, ಕಾರ್ಯದರ್ಶಿ ಎಂ. ಹೆಚ್. ಪ್ರಕಾಶ್, ಉಪಾಧ್ಯಕ್ಷ ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಿ ಮನವಿ ಸಲ್ಲಿಸಿದರು.