ಮಡಿಕೇರಿ, ಮಾ. 9: ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಸರ್ಕಾರವು ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು, ಇದರ ಸದುಪಯೋಗವನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ಹಿರಿಯ ನಾಗರಿಕರಾದ ಜಿ.ಟಿ.ರಾಘವೇಂದ್ರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಬಿ.ಆರ್.ಸಿ. ಕ್ಷೇತ್ರ ಸಂಪನ್ಮೂಲ ಕಚೇರಿ ಸಭಾಂಗಣದಲ್ಲಿ ‘ಅರಿವಿನ ಸಿಂಚನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಿ. ಶಿವರಾಮ್ ಅವರು ಮಾತನಾಡಿ, ಕಲಿಕೆ ಎಂಬದು ಸಾಗರವಿದ್ದಂತೆ, ವಿದ್ಯಾರ್ಥಿಗಳು ನಿರಂತರ ಕಲಿಕೆಯಲ್ಲಿ ತೊಡಗಬೇಕು. ಹುಟ್ಟಿನಿಂದ ಬದುಕಿರುವವರೆಗೆ ಕಲಿಕೆ ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಎನ್.ಎಂ. ಜಗದೀಶ್ ಅವರು ಮಾತನಾಡಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗಾಗಿ ಇರುವ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಸರ್ಕಾರ ಅರಿವಿನ ಸಿಂಚನ ಕಾರ್ಯಕ್ರಮ ಏರ್ಪಡಿಸಿದೆ. ಆ ದಿಸೆಯಲ್ಲಿ ಜಿಲ್ಲೆಯ ಮೂರು ತಾಲೂಕುಗಳ ತಲಾ 5 ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ ಎಂದರು.
ಜಿಲ್ಲೆಯಲ್ಲಿ ವಿಕಲಚೇತನ ಮಕ್ಕಳ ಶಿಕ್ಷಣಕ್ಕಾಗಿ ಪಾಲಿಬೆಟ್ಟ, ಸುಂಟಿಕೊಪ್ಪದ ಸ್ವಸ್ಥ, ಹೀಗೆ 4 ಕಡೆಗಳಲ್ಲಿ ವಿಕಲಚೇತನರಿಗಾಗಿ ವಿಶೇಷ ಶಾಲೆಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದರು.
ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆದು ವಿದ್ಯಾಭ್ಯಾಸವನ್ನು ಉತ್ತಮ ಪಡಿಸಿಕೊಳ್ಳುವಂತೆ ಅವರು ಸಲಹೆ ಮಾಡಿದರು. ಶಿಕ್ಷಕರಾದ ವೀಣಾ, ಅಪೂರ್ವ ಇದ್ದರು. ಕಿಶೋರ್ ನಿರೂಪಿಸಿ, ಮಮತಾ ಪ್ರಾರ್ಥಿಸಿ, ಸತೀಶ್ ವಂದಿಸಿದರು.