ಮಡಿಕೇರಿ, ಮಾ. 17: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿರುವ ಅನುದಾನವನ್ನು ತಾ. 31 ರೊಳಗೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಲವು ಇಲಾಖೆಗಳು ಉತ್ತಮ ಪ್ರಗತಿ ಸಾಧಿಸಿವೆ. ಕೆಲವು ಇಲಾಖೆಗಳು ಭೌತಿಕ ಕಾರ್ಯಕ್ರಮವಾಗಿದ್ದು, ಆರ್ಥಿಕ ಪ್ರಗತಿ ಸಾಧಿಸಿಲ್ಲ. ಇನ್ನು ಕೆಲವು ಇಲಾಖೆಗಳು ಕಾರ್ಯಕ್ರಮವನ್ನೇ ಅನುಷ್ಠಾನಗೊಳಿಸಿಲ್ಲ. ಈ ರೀತಿ ಆದರೆ ಸರ್ಕಾರಕ್ಕೆ ವರದಿ ನೀಡುವುದು ಕಷ್ಟವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಆರೋಗ್ಯ, ಲೋಕೋಪಯೋಗಿ, ಪ್ರವಾಸೋದ್ಯಮ, ಕಾರ್ಮಿಕ ಹೀಗೆ ವಿವಿಧ ಇಲಾಖೆಗಳು ತಮ್ಮ ಇಲಾಖಾ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಪರಿಶಿಷ್ಟರಿಗೆ ತಲುಪಿಸಬೇಕು.
ಭೌತಿಕ ಕಾರ್ಯಕ್ರಮವಾಗಿದ್ದಲ್ಲಿ ಆರ್ಥಿಕ ಪ್ರಗತಿಯ ಅಂಕಿ ಅಂಶಗಳ ಮಾಹಿತಿಯನ್ನು ಒದಗಿಸುವಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಸೋದ್ಯಮ ಇಲಾಖೆಯಲ್ಲಿ ಪರಿಶಿಷ್ಟರಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸುವ ಕಾರ್ಯಕ್ರಮ ಪ್ರಗತಿ ಸಾಧಿಸದಿರುವದಕ್ಕೆ ಅಸಮಾದಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಪ್ರವಾಸಿ ಟ್ಯಾಕ್ಸಿ ವಿತರಣೆ ಸಂಬಂಧಿಸಿದಂತೆ ತಮ್ಮ ಗಮನಕ್ಕೆ ತಂದು ಪ್ರಗತಿ ಸಾಧಿಸಲು ಮುಂದಾಗಬೇಕು ಎಂದರು.
ತಾ. 31 ರೊಳಗೆ ಪರಿಶಿಷ್ಟರಿಗೆ ಮೀಸಲಿಟ್ಟಿರುವ ಅನುದಾನವನ್ನು ವಿನಿಯೋಗ ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.