ಸೋಮವಾರಪೇಟೆ, ಮಾ. 18: ಜಿ.ಪಂ., ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಆರೋಗ್ಯ ಪದ್ಧತಿ-ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಯ ಅಡಿಯಲ್ಲಿ ತಾಲೂಕಿನ ಗಡಿ ಭಾಗದಲ್ಲಿರುವ ಕೊಡ್ಲಿಪೇಟೆಯಲ್ಲಿ ರೂ. 1.12 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಉದ್ಘಾಟಿಸಿದರು.

ನಂತರ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರು, ಗ್ರಾಮೀಣ ಭಾಗದಲ್ಲಿ ಅಸ್ಪತ್ರೆ ಸ್ಥಾಪನೆಯಿಂದ ಈ ಭಾಗದ ಸಾರ್ವಜನಿಕರಿಗೆ ಹೆಚ್ಚಿನ ಉಪಯೋಗ ಕಲ್ಪಿಸಿದಂತಾಗಿದೆ. ಶೀಘ್ರದಲ್ಲೇ ಕೊಡ್ಲಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರನ್ನು ನಿಯೋಜಿಸಲಾಗುವದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭ ಪ್ರತಿ ವೈದ್ಯರು ಕನಿಷ್ಟ ಎರಡು ವರ್ಷಗಳ ಕಾಲ ಗ್ರಾಮೀಣ ಭಾಗದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಬೇಕೆಂಬ ನಿಯಮ ರೂಪಿಸಲಾಗಿತ್ತು. ಅದಕ್ಕೆ ಕೆಲವರು ತಡೆಯಾಜ್ಞೆ ತಂದಿದ್ದು, ಈ ತಡೆಯಾಜ್ಞೆಯನ್ನು ತೆರವುಗೊಳಿಸಲು ಈಗಿನ ಸರ್ಕಾರ ಮುಂದಾಗಬೇಕಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರ ಗಮನಕ್ಕೂ ತರಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯುಕುಮಾರ್, ಜಿ.ಪಂ. ಸದಸ್ಯ ಪುಟ್ಟರಾಜು, ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ಅನುಸೂಯ, ಉಪ ವಿಭಾಗಾಧಿಕಾರಿ ನಂಜುಂಡೇಗೌಡ, ತಾಲೂಕು ತಹಸೀಲ್ದಾರ್ ಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ ಶ್ರೀರಂಗಪ್ಪ, ತಾಲೂಕು ಆರೋಗ್ಯಾಧಿಕಾರಿ ಪಾರ್ವತಿ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಎಂ.ಯು. ಚೇತನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.