ಬೆಂಗಳೂರು, ಮಾ. 29: ಕಸ್ತೂರಿ ರಂಗನ್ ವರದಿಯನ್ವಯ ಸೂಕ್ಷ್ಮ ಪರಿಸರ ವಲಯಗಳನ್ನು ಕರ್ನಾಟಕದಲ್ಲಿ ಗುರುತಿಸಿದ್ದು, ಈ ಬಗ್ಗೆ ರಾಜ್ಯ ಸರಕಾರ 3ನೇ ಬಾರಿಗೆ ಆಕ್ಷೇಪಣೆ ಸಲ್ಲಿಸಲು ಸಿದ್ಧತೆ ನಡೆಸಿದೆ.ಪಶ್ಚಿಮಘಟ್ಟ ವ್ಯಾಪ್ತಿಯ ಜಿಲ್ಲೆಗಳನ್ನು ಪರಿಸರ ಸೂಕ್ಷ್ಮ ವಲಯಕ್ಕೆ ಸೇರ್ಪಡೆಗೊಳಿಸುವ ವಿಷಯದಲ್ಲಿ ರಾಜ್ಯ ಸರಕಾರ ಮತ್ತೆ ಆಕ್ಷೇಪಣೆ ಸಲ್ಲಿಸಲಿರುವದಾಗಿ ರಾಜ್ಯ ಅರಣ್ಯ ಸಚಿವ ರಮಾನಾಥ ರೈ ತಿಳಿಸಿದ್ದಾರೆ.ಅರಣ್ಯ ಸಚಿವ ರಮಾನಾಥ ರೈ ಅಧ್ಯಕ್ಷತೆಯಲ್ಲಿ ಪಶ್ಚಿಮಘಟ್ಟ ಪ್ರದೇಶಕ್ಕೆ ಸೇರಿದ ಶಾಸಕರು ಹಾಗೂ ವಿಧಾನಪರಿಷತ್ತಿನ ಸದಸ್ಯರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳು ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಸಲಹೆ ನೀಡಿದರು. ಅದಕ್ಕೆ ಸರಕಾರ ಸಮ್ಮತಿ ನೀಡಿಲ್ಲ. ಆದರೆ ಈ ಸಂಬಂಧ ಕೇಂದ್ರ ಸರಕಾರ ಹೊರಡಿಸಿರುವ ಅಧಿಸೂಚನೆಗೆ ಆಕ್ಷೇಪ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಅಲ್ಲದೆ, ಪಶ್ಚಿಮಘಟ್ಟ ವ್ಯಾಪ್ತಿಯ ಜನವಸತಿ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಯಿಂದ ಹೊರಗಿಡುವಂತೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ.
ಈ ಕುರಿತು ವಿವರಿಸಿದ ಅರಣ್ಯ ಸಚಿವ ರಮಾನಾಥ ರೈ ಅವರು ಕೇರಳ ಮಾದರಿಯಲ್ಲಿ ಜನವಸತಿ ಪ್ರದೇಶಗಳನ್ನು ಸೂಕ್ಷ್ಮ ವಲಯದ ವ್ಯಾಪ್ತಿಗೆ ಸೇರಿಸಲಾಗಿತ್ತು. ಆದರೆ ನಾವು ಕೇಂದ್ರ ಸರಕಾರಕ್ಕೆ ಸಲ್ಲಿಸುವ ಆಕ್ಷೇಪಣೆಯಲ್ಲಿ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಮನವಿ ಮಾಡುತ್ತೇವೆ ಎಂದರು.
ಈ ತೀರ್ಮಾನಗಳನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು ಸಮಾಲೋಚಿಸಲಾಗುವದು. ನಂತರ ಮತ್ತೊಮ್ಮೆ ಮಲೆನಾಡು ಭಾಗದ ಎಲ್ಲಾ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನ ಕೈಗೊಳ್ಳುವದಾಗಿ ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಮಾತನಾಡಿ, ರಾಜ್ಯ ಸರಕಾರ ಕೇರಳ ಮಾದರಿಯಲ್ಲಿ ಆಕ್ಷೇಪ ಸಲ್ಲಿಸಬೇಕು. ಪಶ್ಚಿಮಘಟ್ಟದಲ್ಲಿ ಭೌಗೋಳಿಕ ಸಮೀಕ್ಷೆ ನಡೆಸಬೇಕೆಂದು ಮನವಿ ಮಾಡಿದ್ದರು.