ಮಡಿಕೇರಿ, ಮಾ. 30: ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ಇಲಾಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಆಶಾ ಕಾರ್ಯಕರ್ತೆಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ನಿಲೇಶ್ ಸರಕಾರದಿಂದ ಆರೋಗ್ಯ ಸೇವೆ ಕಲ್ಪಿಸಲು ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆ ಜೊತೆಗೆ ಆರೋಗ್ಯ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ನಿಜಕ್ಕೂ ಸಂತೋಷದ ವಿಷಯ ಎಂದರು. ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಶಿವಕುಮಾರ್ ಮಾತನಾಡಿ, ಪ್ರತಿಯೊಂದು ಗ್ರಾಮಗಳ ಜನರಿಗೆ ಯೋಜನೆಯ ಪ್ರಯೋಜನ ಮುಟ್ಟಿಸುವ ಕಾರ್ಯ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಜಿ.ಪಂ. ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣ್ಯ ಮಾತನಾಡಿ, ಆಶಾ ಕಾರ್ಯಕರ್ತರು ಆರೋಗ್ಯ ಇಲಾಖೆಯ ಬೆನ್ನೆಲುಬು ಎಂದರು. ಆರೋಗ್ಯ ಇಲಾಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಆಶಾ ಕಾರ್ಯಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಥಮ ಬಹುಮಾನ ಮಡಿಕೇರಿ ತಾಲೂಕಿನ ನಾಪೋಕ್ಲು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸಾರಮ್ಮ, ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಕೆ.ಹೆಚ್. ದಿವ್ಯಾ, ವೀರಾಜಪೇಟೆ ತಾಲೂಕಿನ ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಮೀನಾಕ್ಷಿ ಇವರು ಪಡೆದುಕೊಂಡರು.

ದ್ವಿತೀಯ ಬಹುಮಾನವನ್ನು ಮಡಿಕೇರಿ ತಾಲೂಕಿನ ಮುರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸರೋಜಾ, ಸೋಮವಾರಪೇಟೆ ತಾಲೂಕಿನ ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ರಾಧಾ, ವೀರಾಜಪೇಟೆ ತಾಲೂಕಿನ ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಪಂಕಜಾ ಪಡೆದುಕೊಂಡರು.

ತೃತೀಯ ಬಹುಮಾನವನ್ನು ಮಡಿಕೇರಿ ತಾಲೂಕಿನ ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸುಮತಿ ರೈ, ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಟಿ.ಆರ್. ವೀಣಾ, ವೀರಾಜಪೇಟೆ ತಾಲೂಕಿನ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಬಿ.ವಿ. ಕಾಂತಿ ಪಡೆದುಕೊಂಡರು.