ಮಡಿಕೇರಿ, ಏ. 1: ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಅಪರಾ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಬಿ.ಜೆ. ಮಹೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬೋಪಯ್ಯ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಜಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಬಲಿಷ್ಠ ರಾಷ್ಟ್ರ ನಿರ್ಮಿಸಲು ಸಹಕರಿಸಬೇಕೆಂದು ಕರೆ ನೀಡಿದರು. ಸುನಿಲ್ ಸುಬ್ರಮಣಿ ಮಾತನಾಡಿ, ಸಮಾಜಕ್ಕೆ ಉತ್ತಮ ಸೇವೆ ನೀಡಬೇಕೆಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಪ್ಪಚ್ಚು ರಂಜನ್ ಮಾತನಾಡಿ, ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿ ರೋಗಿಗಳೊಂದಿಗೆ ನಗುಮುಖದಿಂದ ಕರ್ತವ್ಯ ನಿರ್ವಹಿಸುವಂತೆ ಸಲಹೆ ನೀಡಿದರು. ಉತ್ತಮ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡುವದಾಗಿ ಘೋಷಿಸಿದರು.

ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಬಿ.ಜೆ. ಮಹೇಂದ್ರ ಸ್ವಾಗತ ಭಾಷಣ ಮಾಡಿದರು. ಡಾ. ಅಬ್ದುಲ್ ಅಜೀಜ್, ಮೇರಿ ನಾಣಯ್ಯ, ಮಡಿಕೇರಿ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷ ಮೋಹನ್ ಅಪ್ಪಾಜಿ, ಕೊಡಗು ವಿದ್ಯಾಲಯದ ಪ್ರಾಂಶುಪಾಲ ಶ್ರೀನಿವಾಸ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ಪ್ರಾಂಶುಪಾಲ ಡಾ. ಕೆ.ಬಿ. ಕಾರ್ಯಪ್ಪ ಹಾಗೂ ಹಿರಿಯ ಮೂಳೆ ತಜ್ಞ ರವಿ ಅಪ್ಪಾಜಿ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಡಾ. ವಿಶಾಲ್ ಕುಮಾರ್ ಸ್ವಾಗತಿಸಿದರು. ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕøತಿಕ, ಸಾಹಿತ್ಯ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ವಿಜಯಶಾಲಿಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳಿಸಲಾಯಿತು.