ಶನಿವಾರಸಂತೆ/ಸೋಮವಾರಪೇಟೆ, ಏ. 2: ಕೊಡಗು ಜಿಲ್ಲೆಯಲ್ಲಿ ಜಾತ್ಯತೀತ ಜನತಾದಳದ ಬಲವರ್ಧನೆಗೆ ಅಗತ್ಯ ಸಹಕಾರ ಹಾಗೂ ಮಾರ್ಗದರ್ಶನ ನೀಡಲಾಗುವದು. ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಹಿಡಿಯಲಿದೆ ಎಂದು ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲೆಯ ಗಡಿ ಭಾಗ ಹೆತ್ತೂರು ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಶನಿವಾರ ಸಂತೆಯ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಬಿ.ಎ. ಜೀವಿಜಯ ನಾಲ್ಕು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದು, ಈ ಬಾರಿ ಜನತೆ ಜೆಡಿಎಸ್‍ಗೆ ಆಶಿರ್ವಾದ ಮಾಡಲಿದ್ದಾರೆ.

ರಾಜ್ಯದಾದ್ಯಂತ ಜೆಡಿಎಸ್‍ಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದ್ದು, ಪಕ್ಷದ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದÀು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಹಲವು ಜೆಡಿಎಸ್ ಶಾಸಕರು ಅನ್ಯ ಪಕ್ಷಗಳತ್ತ ಮುಖಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡ ಅವರು, ಅಂತಹ ಶಾಸಕರು ಪಕ್ಷ ತೊರೆಯುವದರಿಂದ ಜೆಡಿಎಸ್‍ಗೆ ಯಾವದೇ ನಷ್ಟವಿಲ್ಲ. ಬೇರೆ ಬೇರೆ ಪಕ್ಷಗಳಿಂದಲೂ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್‍ಗೆ ಬರಲಿದ್ದಾರೆ ಎಂದರು.

ಕೊಡಗು ಜಿಲ್ಲೆಯಲ್ಲಿ ಕೇಳಿಬರುತ್ತಿರುವ ಜೆಡಿಎಸ್ ಜಿಲ್ಲಾಧ್ಯಕ್ಷರ ಬದಲಾವಣೆ ಆಗ್ರಹ ಹಾಗೂ ಸ್ವತಃ ಜಿಲ್ಲಾಧ್ಯಕ್ಷರೇ ಮಾಧ್ಯಮಗಳ ಮೂಲಕ ಸ್ಥಾನ ತೊರೆಯುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಸಂಕೇತ್ ಪೂವಯ್ಯ ಅವರ ಬದಲಾವಣೆ ಅಥವಾ ಮುಂದುವರೆಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.