ಕುಶಾಲನಗರ, ಏ. 2: ತಾಂತ್ರಿಕ ಶಿಕ್ಷಣವು ವಿದ್ಯಾರ್ಥಿಗಳ ಜೀವನ ದಿಕ್ಕನ್ನೇ ಬದಲಿಸುವ ಶಕ್ತಿ ಹೊಂದಿದೆ ಎಂದು ವಿಧಾನಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗ ದೊಂದಿಗೆ ನಿರ್ಮಿಸಲಾಗಿರುವ ಸುವರ್ಣ ಭವನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯ ದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು. ನೂತನವಾಗಿ ನಿರ್ಮಾಣಗೊಂಡಿರುವ ಸುವರ್ಣ ಭವನ ವಿದ್ಯಾರ್ಥಿಗಳ ವಿಕಸನಕ್ಕೆ ವೇದಿಕೆಯಾಗಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಪ್ರತೀ ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರಿದ ನಂತರ ಸಂಸ್ಥೆ ಹಾಗೂ ಶಿಕ್ಷಣ ನೀಡಿದ ಗುರುಗಳನ್ನು ಸ್ಮರಿಸಿಕೊಳ್ಳುವದು ಅತ್ಯಗತ್ಯವಾಗಿದೆ ಎಂದರು.

ಕಾವೇರಿ ವೇದಿಕೆ ಉದ್ಘಾಟನೆ ನೆರವೇರಿಸಿದ ತಾಂತ್ರಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಎನ್. ರವಿಚಂದ್ರನ್ ಮಾತನಾಡಿ, ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಯೊಂದಿಗೆ ಸಾಮಾಜಿಕ ಕಳಕಳಿ ಹೊಂದುವಂತೆ ಕರೆ ನೀಡಿದರು.

ಪಿರಿಯಾಪಟ್ಟಣ ಕ್ಷೇತ್ರದ ಮಾಜಿ ಶಾಸಕ ಹೆಚ್.ಸಿ. ಬಸವರಾಜು ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಾವೇರಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಂ.ಕೆ. ದಿನೇಶ್ ನೂತನ ಭವನ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಎನ್.ಎಸ್.ಲೋಕೇಶ್ ಸಂಘದ ವರದಿ ವಾಚಿಸಿದರು. ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಹಿರಿಯ ವಿದ್ಯಾರ್ಥಿಗಳನ್ನು ಸಭೆಯಲ್ಲಿ ಗೌರವಿಸಲಾಯಿತು.

ಇದೇ ಸಂದರ್ಭ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಕಾಲೇಜು ಪ್ರಾಂಶುಪಾಲರು ಹಾಗೂ ಸಂಘದ ಗೌರವಾಧ್ಯಕ್ಷ ಹೆಚ್.ವಿ. ಶಿವಪ್ಪ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ 2016-17ನೇ ಸಾಲಿನಲ್ಲಿ ಸಾಧನೆಗೈದ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಸೋಮವಾರಪೇಟೆ ತಾ.ಪಂ. ಉಪಾಧ್ಯಕ್ಷÀ ಅಭಿಮನ್ಯು ಕುಮಾರ್, ಹಿರಿಯ ವಿದ್ಯಾರ್ಥಿ ಸಂಘದ ನಿರ್ದೇಶಕರು ಗಳಾದ ವಿ.ಡಿ. ಪುಂಡರೀಕಾಕ್ಷ, ಕೆ.ಎಸ್. ರಾಜಶೇಖರ್, ಎಂ.ಎನ್. ಚಂದ್ರಮೋಹನ್, ಪಿ.ಆರ್. ಮಂಜುನಾಥ್, ಟಿ.ಎನ್. ಕೋದಂಡರಾಮ್ ಮತ್ತಿತರರು ಇದ್ದರು. ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಕುಮಾರ್ ಸ್ವಾಗತಿಸಿದರು, ಹಿರಿಯ ವಿದ್ಯಾರ್ಥಿ ಸಂಘದ ನಿರ್ದೇಶಕಿ ಮಮತಾ ವಂದಿಸಿದರು.