ಮಡಿಕೇರಿ, ಏ. 5: ಸಮಾಜದ ಪ್ರತಿಯೊಬ್ಬರೂ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಪ್ರಗತಿ ಸಾಧಿಸಿದಾಗ ದೇಶದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಶೋಷಿತರು ಸಮಾಜದ ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಬೇಕಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಿರ್ಲಕ್ಷ್ಯಕ್ಕೆ ತುತ್ತಾಗಿದ್ದ ಸಮಾಜದವರನ್ನು ಮನ್ವಂತರಕ್ಕೆ ಕೊಂಡೊಯ್ಯಲು ಶ್ರಮಿಸಿದ ಬಾಬು ಜಗಜೀವನ್ ರಾಮ್ ಅವರ ಜೀವನ ಸಾಧನೆಯನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವದರ ಜೊತೆಗೆ ಆದರ್ಶಗಳನ್ನು ಮೈಗೂಡಿಸಿ ಕೊಳ್ಳುವಂತಾಗಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಾಜಕ್ಕೆ ತಮ್ಮ ಆಡಳಿತ ಅವಧಿಯಲ್ಲಿ ಹಲವು ಕಾಯ್ದೆಗಳನ್ನು ಜಾರಿಗೊಳಿಸಿ ಜನಮೆಚ್ಚುಗೆಗೆ ಪಾತ್ರರಾದರು ಎಂದು ಸ್ಮರಿಸಿದರು.

ದೇಶದ ಶಾಂತಿ, ಸಮಾನತೆಗಾಗಿ ಹೋರಾಡಿದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್‍ರಾಮ್ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಜಾತಿ ರಹಿತ, ಶೋಷಿತ ರಹಿತ, ವರ್ಗ ರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರಮಿಸಿದ್ದಾರೆ. ದೇಶದಲ್ಲಿ ಎಲ್ಲಾ ಜನಾಂಗದವರು ಸಮಾನರಾಗಿದ್ದು, ಶೈಕ್ಷಣಿಕವಾಗಿ ಸಾಮಾಜಿಕವಾಗಿ ಪ್ರತಿಯೊಬ್ಬರೂ ಬಲಿಷ್ಠರಾಗಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕರೆ ನೀಡಿದರು.

ಸರ್ಕಾರಿ ಇಲಾಖೆಗಳಿಗೆ ಬಡ ಜನರ ಏಳಿಗೆಗೆ ಬರುವ ಅನುದಾನ ಸಕಾಲದಲ್ಲಿ ತಲುಪಿಸುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಅತ್ಯಂತ ಜವಾಬ್ದಾರಿ ಯಿಂದ ಕೆಲಸ ನಿರ್ವಹಿಸಬೇಕು. ಇದರ ಜೊತೆಗೆ

(ಮೊದಲ ಪುಟದಿಂದ) ಸರ್ಕಾರದ ಸವಲತ್ತುಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವಲ್ಲಿ ಶ್ರಮಿಸಬೇಕು ಎಂದರು.

ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಮಾತನಾಡಿ ಬಾಬು ಜಗಜೀವನ್ ರಾಮ್ ಅವರು ದೀನ ದಲಿತರ ಕಣ್ಮಣಿಯಾಗಿದ್ದಾರೆ. ಇವರು ಹಿಂದುಳಿದ ಜನರನ್ನು ಮೇಲೆತ್ತಲು, ಶೋಷಿತ ಜನಾಂಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರಾಗಿ ದ್ದಾರೆ. ಬಡತನದಲ್ಲಿ ಹುಟ್ಟಿ ಉನ್ನತ ಸ್ಥಾನವನ್ನು ಅಲಂಕರಿಸಿ ದೇಶದ ಅಭಿವೃದ್ಧಿಯನ್ನು ಸಾಧಿಸಲು ಚಿಂತಿಸಿದವರು. ಇವರ ಆದರ್ಶ ಗುಣಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು ಎಂದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ. ಶ್ರೀಧರ್ ಹೆಗಡೆ ಮಾತನಾಡಿ ಭಾರತ ಕಂಡ ಕೆಲವು ಶೋಷಿತ ವರ್ಗದ ನಾಯಕರುಗಳಲ್ಲಿ ಬಾಬು ಜಗನಜೀವನ್‍ರಾವ್ ಅವರೂ ಒಬ್ಬರು. ಸಾಮಾಜಿಕ ಪರಿಸ್ಥಿತಿಯಲ್ಲಿ ಕೆಲವು ವ್ಯಕ್ತ್ತಿಗಳಿಂದ ಶೋಷಣೆ ಗೊಳಗಾದ ವರ್ಗದ ಬಗ್ಗೆ ಅಪಾರ ಕಾಳಜಿ ವಹಿಸಿ, ಶೋಷಣೆಯನ್ನು ವಿರೋಧಿಸಿದವರು ಎಂದು ಹೇಳಿದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅವರು ನಗರದ ಸುದರ್ಶನ್ ವೃತ್ತದ ಬಳಿ ಡಾ.ಬಾಬು ಜಗಜೀವನ್‍ರಾಮ್ ಅವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ. ವಿಜುಸುಬ್ರಮಣಿ, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಇತರರು ಇದ್ದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಯಾದೇವಿ ಗಲಗಲಿ ಸ್ವಾಗತಿಸಿದರು, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್ ನಿರೂಪಿಸಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಿಕ್ಕಬಸಯ್ಯ ವಂದಿಸಿದರು.

ಸೋಮವಾರಪೇಟೆ: ಸ್ವಾತಂತ್ರ್ಯಾ ನಂತರದಲ್ಲಿ ದೇಶದಲ್ಲಿದ್ದ ಹಸಿವನ್ನು ಹಸಿರು ಕ್ರಾಂತಿಯ ಮೂಲಕ ಹೋಗಲಾಡಿಸಲು ಯತ್ನಿಸಿದ ಮಹಾನ್ ಚೇತನ ಬಾಬು ಜಗಜೀವನ್ ರಾಂ ಎಂದು ಬಣ್ಣಿಸಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಜೆ.ಆರ್. ಪಾಲಾಕ್ಷ, ಇವರ ಆದರ್ಶಮಯ ಜೀವನವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ಸ್ತ್ರೀಶಕ್ತಿ ಭವನದಲ್ಲಿ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್‍ರವರ 110ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ 14ವರ್ಷ ಜೈಲುವಾಸ ಅನುಭವಿಸಿದ ಬಾಬೂಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಸಮಾನತೆ ಹಾಗು ಶೋಷಣೆ ಮುಕ್ತ ಸಮಾಜ ಕಟ್ಟಲು ಹೋರಾಟ ಮಾಡುತ್ತ, ದೀನದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿ ಅನೇಕ ಯೋಜನೆಗಳನ್ನು ರೂಪಿಸಿದ ಮಹಾನ್ ಆಡಳಿತಗಾರ ಎಂದು ಸ್ಮರಿಸಿದರು.

ಉತ್ತಮ ಸಂಸದೀಯ ಪಟುವಾಗಿದ್ದ ಬಾಬೂಜೀ ಕಾರ್ಮಿಕ ಖಾತೆ, ವಿಮಾನಯಾನ ಖಾತೆ, ಆಹಾರ, ರೈಲ್ವೆ ಮತ್ತು ಕೃಷಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು. ಕೃಷಿ ಸಚಿವರಾಗಿದ್ದ ಸಂದರ್ಭ ಆಧುನಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಲು ಯೋಜನೆ ರೂಪಿಸುವದರೊಂದಿಗೆ, ಅಣೆಕಟ್ಟುಗಳ ನಿರ್ಮಾಣ ಮಾಡಿ, ನೀರಿಗೆ ಹೆಚ್ಚಿನ ಮಹತ್ವ ನೀಡಿ, ದೇಶದಲ್ಲಿ ಹಸಿರುಕ್ರಾಂತಿಗೆ ನಾಂದಿ ಹಾಡಿದರು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ಜಗಜೀವನರಾಂ ಅವರು ರಕ್ಷಣಾ ಸಚಿವರಾಗಿದ್ದ ಸಂದರ್ಭ ಪಾಕಿಸ್ತಾನ-ಬಾಂಗ್ಲಾ ಯುದ್ದದಲ್ಲಿ ಪಾಕಿಸ್ತಾನವನ್ನು ಹಿಮ್ಮೆಟ್ಟಿಸುವ ಮೂಲಕ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪ ರಾಜೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಜಿಪಂ ಸದಸ್ಯೆ ಪೂರ್ಣಿಮ ಗೋಪಾಲ್, ತಾಪಂ ಸದಸ್ಯೆ ತಂಗಮ್ಮ, ತಹಶೀಲ್ದಾರ್ ಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮೇಗೌಡ ಮತ್ತಿತರರು ಉಪಸ್ಥಿತರಿದ್ದರು.

ವೀರಾಜಪೇಟೆ: ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬದಿಗೊತ್ತಿ ಸಾಮಾಜಿಕ ನ್ಯಾಯಗಳನ್ನು ಪರಿಪಾಲಿಸದೆ ನಾವಿಂದು ಜಾತೀಯ ಕೂಪದಲ್ಲಿ ಬಿದ್ದು ಒದ್ದಾಡುತ್ತಿದ್ದೇವೆ ಎಂದು ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ವನಿತ್ ಕುಮಾರ್ ಹೇಳಿದರು.

ವೀರಾಜಪೇಟೆ ಪುರಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ ಬಾಬುಜಗಜೀವನ್‍ರಾಂ ಅವರ 110ನೇ ಜನ್ಮ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು.

ವೀರಾಜಪೇಟೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ತಹಶೀಲ್ದಾರ್ ಎಂ.ಸಿ. ಮಹಾದೇವಸ್ವಾಮಿ, ಕಾರ್ಯ ನಿರ್ವಹಣಾಧಿಕಾರಿ ಕಿರಣ್ ಪಡ್ನೇಕರ್, ಜಿಲ್ಲಾ ಪಂಚಾಯತಿ ಸದಸ್ಯರಾದ ಪಂಕಜ, ಲೀಲಾವತಿ, ತಾಲೂಕು ಪಂಚಾಯಿತಿ ಸದಸ್ಯೆ ಆಲತಂಡ ಸೀತಮ್ಮ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಚಿನ್ ಕುಟ್ಟಯ್ಯ, ಉಪಾಧ್ಯಕ್ಷೆ ತಸ್ನೀಂ ಅಕ್ತರ್ ಉಪಸ್ಥಿತರಿದ್ದರು.

ಶಿಕ್ಷಕ ಎ.ವಿ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಎಂಡ್ರಿಟಾ ಆಳ್ವಾರೀಸ್ ಸ್ವಾಗತಿಸಿದರು.