ಮಡಿಕೇರಿ, ಏ. 5: ಒಬ್ಬನೆ ವ್ಯಕ್ತಿ ಎರಡು ಅಥವಾ ಎರಡಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವದಾಗಲಿ, ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ, ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳಾಗಲೀ, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳಾಗಲೀ, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳಾಗಲೀ, ಪ್ರತಿ ಮಾಹೆ 150 ಯುನಿಟ್‍ಗಳಿಗಿಂತಲೂ ಹೆಚ್ಚಿನ ವಿದ್ಯುತ್ಚಕ್ತಿಯನ್ನು ಬಳಕೆಮಾಡುವ ಕುಟುಂಬಗಳಾಗಲೀ, ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳಾಗಲೀ. ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಪಡೆದಿದ್ದಲ್ಲಿ ಅಂತಹ ಕುಟುಂಬಗಳ ಬಗ್ಗೆ ಮಾಹಿತಿ ನೀಡಿದಲ್ಲಿ ಪ್ರತಿ ಪಡಿತರ ಚೀಟಿಗೆ 400 ರೂ.ಗಳ ಮೊತ್ತವನ್ನು ಹಾಗೂ ಅಕ್ರಮವಾಗಿ ಪದಾರ್ಥಗಳನ್ನು ದಾಸ್ತಾನು ಮಾಡಿರುವವರ ಮತ್ತು ಅನಧಿಕೃತವಾಗಿ ಸಾಗಾಣಿಕೆ ಮಾಡುತ್ತಿರುವವರ ಬಗ್ಗೆ ಮಾಹಿತಿ ನೀಡಿದಲ್ಲಿ ವಶಪಡಿಸಿಕೊಂಡ ಮೌಲ್ಯದ ಶೇಕಡ 5 ಭಾಗ ಮೌಲ್ಯ (ಹಣ)ವನ್ನು ಬಹುಮಾನವಾಗಿ ನೀಡಲಾಗುವದು. ಮಾಹಿತಿದಾರರ ಹೆಸರುಗಳನ್ನು ಗೌಪ್ಯವಾಗಿ ಇಡಲಾಗುವದು. ಮಾಹಿತಿಗಳನ್ನು ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇವರ ದೂರವಾಣಿ ಸಂಖ್ಯೆ 08272-229457 ಗೆ ಕರೆ ಮಾಡಲು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಅವರು ಮನವಿ ಮಾಡಿದ್ದಾರೆ.