ಕುಶಾಲನಗರ, ಏ. 8: ಕಾವೇರಿ ನದಿ ಸಂರಕ್ಷಣೆ ಹಿನ್ನೆಲೆ ಸದ್ಯದಲ್ಲಿಯೇ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆದು ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವದು ಎಂದು ಜಿಲ್ಲಾಧಿಕಾರಿ ಡಾ. ಆರ್.ವಿ. ಡಿಸೋಜ ಭರವಸೆ ನೀಡಿದ್ದಾರೆ.
ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿಯ ಪ್ರಮುಖರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ನದಿ ಸಂರಕ್ಷಣೆ ಬಗ್ಗೆ ಮನವಿ ಸಲ್ಲಿಸಿದ ಸಂದರ್ಭ ಪ್ರತಿಕ್ರಿಯಿಸಿದ ಅವರು, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳ ಸಭೆಯನ್ನು ಸದ್ಯದಲ್ಲಿಯೇ ಕರೆಯಲಾಗುವದು. ಕಾವೇರಿ ನದಿ ಸಂರಕ್ಷಣೆ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದಿಂದ ಆದೇಶ ಹೊರಬಿದ್ದಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮಕೈಗೊಳ್ಳುವದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ದುಬಾರೆಯಲ್ಲಿ ಯಾವದೇ ಚಟುವಟಿಕೆ ನಡೆಸಲು ಸರಕಾರದಿಂದ ಟೆಂಡರ್ ಕರೆಯುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವದು ಎಂದು ತಿಳಿಸಿದ ಅವರು, ಸದ್ಯದಲ್ಲಿಯೇ ಈ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಿದೆ ಎಂದರು.