ಸೋಮವಾರಪೇಟೆ,ಏ.14: ಡಾ. ಬಿ.ಆರ್. ಅಂಬೇಡ್ಕರ್ ವಿಚಾರಧಾರೆಗಳ ಬಗ್ಗೆ ಜ್ಞಾನದರ್ಶನವನ್ನು ನೀಡುವಂತಹ ತರಗತಿಯನ್ನು ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ಪ್ರಾರಂಭಿಸಬೇಕೆಂದು ಮೈಸೂರು ವಿಶ್ವ ವಿದ್ಯಾನಿಲಯದ ಉನ್ನತ ಸಂಶೋಧಕ ಡಾ. ಡಿ.ಜೆ. ಶಶಿಕುಮಾರ್ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ, ಆದರ್ಶ ಮತ್ತು ಹೋರಾಟಗಳು ಪ್ರೇರಣೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಪದವಿ ಕಾಲೇಜುಗಳಲ್ಲಿ ಅಂಬೇಡ್ಕರ್‍ರವರ ಜೀವನ ಸಾಧನೆಗಳನ್ನು ತಿಳುಸುವಂತಹ ಪ್ರಯತ್ನ ಸರಕಾರದ ಮಟ್ಟದಲ್ಲಿಯೇ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್ ಮಾತನಾಡಿ, ಅಂಬೇಡ್ಕರ್ ಜಾತ್ಯತೀತ, ಅಖಂಡ ನವಭಾರತ ನಿರ್ಮಾಣಕ್ಕೆ ಸಂವಿಧಾನದಲ್ಲಿ ಭದ್ರ ಬುನಾದಿಯನ್ನು ಹಾಕಿದಂತಹ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಪೂರ್ಣಿಮಾ ಗೋಪಾಲ್, ಸರೋಜಮ್ಮ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಧರ್ಮಪ್ಪ, ಸದಸ್ಯೆ ತಂಗಮ್ಮ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭ ಮಾಜಿ ಸೈನಿಕ ಮಾಟ್ನಳ್ಳಿ ಮಹೇಶ್, ಸಾರಿಗೆ ಇಲಾಖೆಯ ನಿರ್ವಾಹಕಿ ಶೈಲಿ, ಶಿಕ್ಷಣ ಇಲಾಖೆಯ ಸಿ.ಆರ್.ಪಿ. ಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು. ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಳೆದ ಸಾಲಿನಲ್ಲಿ ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ವ್ಯಾಸಂಗ ಮಾಡಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾಗುವ ಲ್ಯಾಪ್‍ಟಾಪ್ ವಿತರಿಸಲಾಯಿತು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಜೇಸಿ ವೇದಿಕೆಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಮೆರವಣಿಗೆಯಲ್ಲಿ ವಿವಿಧ ದಲಿತಪರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಟಿಬೇಟಿಯನ್ ಕಲಾವಿದರ ತಂಡ ಪಾಲ್ಗೊಂಡಿತ್ತು.