ಮಡಿಕೇರಿ, ಏ. 20: ರಸ್ತೆಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಿ.ಡಬ್ಲ್ಯು.ಡಿ. ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ಇಕ್ಕೆಲಗಳಲ್ಲಿ ರಸ್ತೆಗಳಿಗೆ ತಡೆಯಾಗಿರುವ ಮರದ ಕೊಂಬೆಗಳನ್ನು ತೆಗೆದು ಹಾಕಿ ರಸ್ತೆ ಸಂಚಾರಕ್ಕೆ ಸುಗಮವಾಗುವಂತೆ ತುರ್ತು ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಹೆಚ್ಚು ಒತ್ತು ನೀಡುವಂತಾಗಬೇಕು. ಶಾಲಾ-ಕಾಲೇಜುಗಳು ಹಳೇ ವಾಹನಗಳನ್ನು ಬದಲಿಸಿ ವೇಗ ನಿಯಂತ್ರಕವನ್ನು ಕಡ್ಡಾಯವಾಗಿ ಅಳವಡಿಸಲು ಶಿಕ್ಷಣ ಇಲಾಖೆ ಬಿಇಓ ಗಳಿಗೆ ನಿರ್ದೇಶನ ನೀಡಿದರು.

ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ರಸ್ತೆ ಸುರಕ್ಷತೆಗಳ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸವನ್ನು ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರು ಮಾಡಬೇಕು ಎಂದು ಹೇಳಿದರು.

ಸೋಮವಾರಪೇಟೆ, ಸಿದ್ದಾಪುರ ರಸ್ತೆಗಳಲ್ಲಿ ಮುಖ್ಯವಾಗಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಫಲಕಗಳನ್ನು ಅಳವಡಿಸಿ, ಅವೈಜ್ಞಾನಿಕ ರಸ್ತೆ ವಿಭಜಕಗಳನ್ನು ಮತ್ತು ಉಬ್ಬುಗಳನ್ನು ತೆರವು ಮಾಡಬೇಕು. ಅಪಘಾತ ಮತ್ತು ಜೀವಹಾನಿಯನ್ನು ತಡೆಗಟ್ಟುವಲ್ಲಿ ಕಾರ್ಯೋನ್ಮುಖವಾಗಬೇಕು.

ನಗರದಲ್ಲಿನ ರಸ್ತೆಗಳ ಗುಂಡಿಗಳನ್ನು ಮುಚ್ಚುವಂತೆ, ವಾಹನ ನಿಲುಗಡೆ ಸಮಸ್ಯೆಯನ್ನು ಬಗೆಹರಿಸುವಂತೆ, ನಗರದಲ್ಲಿ ಇರುವಂತಹ ಅಕ್ರಮ ಟೆಂಟ್‍ಗಳನ್ನು ತೆರವುಗಳಿಸುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಿದರು.

ರಾಜಾಸೀಟ್ ಪ್ರದೇಶದಲ್ಲಿನ ಮತ್ತು ರೇಸ್ ಕೋರ್ಸ್ ರಸ್ತೆಯಲ್ಲಿನ ಪಾರ್ಕಿಂಗ್ ಸಮಸ್ಯೆಗಳನ್ನು ಬಗೆಹರಿಸುವಂತೆ ಅವರು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಮಾತನಾಡಿ ರಸ್ತೆಯಲ್ಲಿ ಇರುವಂತಹ ಅವೈಜ್ಞಾನಿಕ ಉಬ್ಬುಗಳನ್ನು ತೆರವುಗೊಳಿಸಿ ಅಪಘಾತಗಳನ್ನು ತಪ್ಪಿಸಬೇಕು. ಹಾಗೂ ರಸ್ತೆ ಅಪಘಾತಗಳ ಬಗ್ಗೆ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಕುಶಾಲನಗರ-ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತಗಳನ್ನು ತಡೆಗಟ್ಟುವಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಕರ್ನಾಟಕದಲ್ಲಿ ಸುಮಾರು ಹತ್ತು ಸಾವಿರ ಜನರು ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ತಿಳಿಸಿದರು.

(ಮೊದಲ ಪುಟದಿಂದ) ಜನರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಹಾಗೂ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಮಾನದಂಡಗಳನ್ನು ತಪ್ಪದೇ ಪಾಲಿಸುವಂತೆ ಆರ್.ಟಿ.ಓ. ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಜಿ.ಪಂ. ಸಿಇಓ ಚಾರುಲತಾ ಸೋಮಲ್, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಇತರರು ಇದ್ದರು.

ಸಾರಿಗೆ ಪ್ರಾಧಿಕಾರ ಸಭೆ

ಚೆಟ್ಟಳ್ಳಿ, ಸಿದ್ದಾಪುರ ಮಾರ್ಗವಾಗಿ ಬೆಂಗಳೂರು-ಮೈಸೂರಿಗೆ ಸಂಜೆ 7ರ ನಂತರ ಬಸ್ ಸೌಲಭ್ಯವನ್ನು ಒದಗಿಸುವಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು. ಮಧುರೈಗೆ ವೀರಾಜಪೇಟೆ ಮಾರ್ಗವಾಗಿ ಬಸ್ ಸೌಲಭ್ಯವನ್ನು ಕಲ್ಪಿಸುವಂತೆ ಹಾಗೂ ಈ ಸಂದರ್ಭ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್‍ಗಳ ಸಂಚಾರಕ್ಕೆ ಕ್ರಮ ವಹಿಸುವಂತೆ ಆರ್.ಟಿ.ಓ. ಅಧಿಕಾರಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಯಿತು. ಕೆ.ಎಸ್.ಆರ್.ಟಿ.ಸಿ. ಬಸ್‍ಗಳು ಆಗಮನ, ನಿರ್ಗಮನ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮವಹಿಸಬೇಕು. ಅನಧಿಕೃತ ಖಾಸಗಿ ವಾಹನಗಳಿಗೆ ನಿರ್ಬಂಧವನ್ನು ಹೇರಬೇಕು ಎಂದರು.

ವಾಹನ ಚಾಲಕರು ಮತ್ತು ಮಾಲೀಕರು ಮಾಡಿದ ಮನವಿಗೆ ಪ್ರತಿಕ್ರಿಯಿಸುತ್ತಾ ಹಳದಿ ಬೋರ್ಡ್ ಪ್ರವಾಸಿ ಟ್ಯಾಕ್ಸಿ ಚಾಲಕರಿಗೆ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅಗತ್ಯವಿರುವ ಕಡೆಗಳಿಗೆ ಬಸ್‍ಗಳ ಸೇವೆಯನ್ನು ತುರ್ತಾಗಿ ನೀಡುವಂತಾಗಬೇಕು. ಇದಕ್ಕೆ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ. ಇವರುಗಳು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಫೆಲಿಕ್ಸ್ ಡಿಸೋಜ, ಕೆ.ಎಸ್.ಆರ್.ಟಿ.ಸಿ. ನಿಯಂತ್ರಣಾಧಿಕಾರಿ ಟಿ.ಒ. ವೆಂಕಟೇಶ್ ಮತ್ತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ಖಾಸಗಿ ಬಸ್ ಮಾಲಿಕರ ಸಂಘದ ಅಧ್ಯಕ್ಷರು, ಪ್ರವಾಸಿ ಟ್ಯಾಕ್ಸಿ ಸಂಘದ ಮಾಲೀಕರು ಇತರರು ಇದ್ದರು.