ಕೂಡಿಗೆ, ಏ. 24: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ವಿಶ್ವ ನಾಯಕರಾಗಿದ್ದು, ಅವರು ಹುಟ್ಟಿದ ದಿನವನ್ನು 143 ರಾಷ್ಟ್ರಗಳಲ್ಲಿ ಆಚರಣೆ ಮಾಡುವ ಮೂಲಕ ವಿಶೇಷ ಗೌರವ ನೀಡಲಾಗುತ್ತಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು.

ಕೂಡುಮಂಗಳೂರು ಭಾರತೀಯ ಜನತಾ ಪಕ್ಷದ ಸ್ಥಾನೀಯ ಸಮಿತಿ ವತಿಯಿಂದ ರಾಮೇಶ್ವರ ಸಹಕಾರ ಭವನದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 126ನೇ ಹಾಗೂ ಬಾಬು ಜಗಜೀವನ್ ರಾಮ್ ಅವರ 110ನೇ ಜನ್ಮದಿನಾಚರಣೆ ಹಾಗೂ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಹಲವಾರು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದ್ದು, ಈ ಎಲ್ಲಾ ಕಾರ್ಯಕ್ರಮಗಳ ಕುರಿತು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ದೇಶದಲ್ಲಿ ಬಡತನ ನಿರ್ಮೂಲನೆ ಮಾಡುತ್ತೇವೆ ಎಂದು 60 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷ ಹೇಳಿಕೊಂಡು ಬರುತ್ತಿದೆ. ಆದರೆ ಬಡವರ ಏಳಿಗೆ ಮಾತ್ರ ಮಾಡಿಲ್ಲ ಎಂದು ಟೀಕಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್ ಮಾತನಾಡಿ, ದೇಶದಲ್ಲಿ ಆಳವಾಗಿ ಬೇರೂರಿದ್ದ ಅಸ್ಪøಶ್ಯತೆ ಎಂಬ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿದ ಅಂಬೇಡ್ಕರ್ ಎಲ್ಲಾ ಕಾಲಕ್ಕೂ ಸ್ಮರಣೀಯರು ಎಂದರು.

ಕೂಡುಮಂಗಳೂರು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಜಿ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.

ಜಿ.ಪಂ. ಸದಸ್ಯೆ ಕೆ.ಆರ್. ಮಂಜುಳಾ, ತಾ.ಪಂ. ಸದಸ್ಯ ಡಿ.ಎಸ್. ಗಣೇಶ್, ಪುಷ್ಪಾ ಜರ್ನಾಧನ್, ಕಾಫಿ ಮಂಡಳಿ ನಿರ್ದೇಶಕ ಜಿ.ಎಲ್.ನಾಗರಾಜು, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಚಿಲ್ಲನ ಗಣಿಪ್ರಸಾದ್, ತಾಲೂಕು ಘಟಕದ ಅಧ್ಯಕ್ಷ ಎಂ.ಎನ್. ಕುಮಾರಪ್ಪ, ಉಪಾಧ್ಯಕ್ಷ ಕೆ.ಕೆ. ಬೋಗಪ್ಪ, ಎಸ್.ಸಿ. ಮೋರ್ಚಾದ ತಾಲೂಕು ಘಟಕದ ಅಧ್ಯಕ್ಷ ಯೋಗೇಶ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಿಸಾರ್ ಅಹಮ್ಮದ್, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಬಿ.ಜಯಂತ್, ಹೋಬಳಿ ಮಾಜಿ ಅಧ್ಯಕ್ಷ ಕೆ.ವರದ ಉಪಸ್ಥಿತರಿದ್ದರು.

ತಾಲೂಕು ಮಹಿಳಾ ಘಟಕದ ಉಪಾಧ್ಯಕ್ಷೆ ನಿರ್ಮಲಾ ಪ್ರಾರ್ಥಿಸಿದರು. ತಾಲೂಕು ಮುಖಂಡ ವರದರಾಜ್ ದಾಸ್ ಸ್ವಾಗತಿಸಿದರು. ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಬಾಸ್ಕರ್ ನಾಯಕ್ ವಂದಿಸಿದರು.

ನೂತನವಾಗಿ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಬಿ.ಭಾರತೀಶ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.

ಮೊದಲಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಇದೇ ಸಂದರ್ಭ ಕೂಡುಮಂಗಳೂರು ಗ್ರಾ.ಪಂ.ಸದಸ್ಯೆ ಜ್ಯೋತಿ ಪ್ರಮೀಳಾ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಕೂಡುಮಂಗಳೂರು, ಮುಳ್ಳುಸೋಗೆ ವ್ಯಾಪ್ತಿಯ 20ಕ್ಕೂ ಅಧಿಕ ವಿವಿಧ ಪಕ್ಷಗಳ ಮುಖಂಡರು ಬಿಜೆಪಿ ಸೇರಿದ್ದರು.