ಮಡಿಕೇರಿ, ಏ.23: ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿ ಭಾಗ್ಯ, ವಸತಿ ಭಾಗ್ಯ, ವಿದ್ಯಾಸಿರಿ, ಬಿದಾಯಿ, ಮನಸ್ವಿನಿ, ಮೈತ್ರಿ, ಹೊಸ ಬೆಳಕು, ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆನ್‍ಲೈನ್ ಮಾರುಕಟ್ಟೆ ವ್ಯವಸ್ಥೆ ಹೀಗೆ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಬಡವರು ಸರ್ಕಾರದ ಕಾರ್ಯಕ್ರಮಗಳ ಸದುಪಯೋಗ ಪಡೆದು ಉತ್ತಮ ಜೀವನ ನಡೆಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆ ಅನ್ನಭಾಗ್ಯ ಯೋಜನೆಯಡಿ ಆದ್ಯತಾ ಕುಟುಂಬಗಳ ಪ್ರತಿ ಸದಸ್ಯರಿಗೆ 7 ಕೆ.ಜಿ. ಉಚಿತ ಅಕ್ಕಿ ನೀಡಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡವರ, ಶೋಷಿತರ, ದೀನ ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ನಾಲ್ಕು ವರ್ಷಗಳಿಂದ ಹತ್ತು ಹಲವು ಜನಪರ, ರೈತಪರ ಮತ್ತು ಪ್ರಗತಿಪರ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ವಿಧಾನ ಪರಿಷತ್ ಸದಸೆÀ್ಯ ವೀಣಾ ಅಚ್ಚಯ್ಯ ಅವರು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಬಡಪರವಾಗಿದೆ. ಬಡ ಜನರಿಗಾಗಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ ಎಂದರು.

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ ಅನ್ನಭಾಗ್ಯ ಯೋಜನೆಯಡಿ ಯಾವದೇ ಲೋಪಗಳು ಕಂಡುಬಂದರೆ ತಕ್ಷಣವೇ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಬಹುದಾಗಿದೆ ಎಂದು ಮನವಿ ಮಾಡಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಡ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳಿಗೆ/ ವಿಚ್ಚೇದಿತ ಮಹಿಳೆ ಮತ್ತು ವಿಧವೆಯರಿಗೆ ವೈಯಕ್ತಿಕ ಹಾಗೂ ಸಾಮೂಹಿಕ ಮದುವೆ ಕಾರ್ಯಗಳಿಗೆ ಸಹಾಯಧನ ನೀಡುವ ಬಿದಾಯಿ ಕಾರ್ಯಕ್ರಮದಡಿ ಸುಮಾರು 70 ಮಂದಿಗೆ ತಲಾ 50 ಸಾವಿರ ರೂಗಳ ಸಹಾಯಧನದ ಚೆಕ್‍ನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಪುಸ್ತಕ ಬಿಡುಗಡೆ ಮಾಡಲಾಯಿತು. ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ವಿಜು ಸುಬ್ರಮಣಿ, ನಗರಸಭೆ ಅಧ್ಯಕೆÀ್ಷ ಕಾವೇರಮ್ಮ ಸೋಮಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ತಹಶೀಲ್ದಾರ್ ಕುಸುಮಾ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ನಿರ್ದೇಶಕ ಯಾಕೂಬ್ ಇತರರು ಇದ್ದರು.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಪುಟ್ಟಸ್ವಾಮಿ ಸ್ವಾಗತಿಸಿದರು, ಬಿಸಿಎಂ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿನಿ ಯರು ನಾಡಗೀತೆ ಹಾಡಿದರು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ವಿ.ಸುರೇಶ್ ನಿರೂಪಿಸಿ, ವಂದಿಸಿದರು.