ಸೋಮವಾರಪೇಟೆ, ಏ.28: ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಹಾಗೂ ತಾಲೂಕು ವೀರಶೈವ ಮಹಾಸಭಾ ಮತ್ತಿತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ತಾ. 29ರಂದು (ಇಂದು) ನಗರದಲ್ಲಿ ಬಸವ ಜಯಂತಿ ಆಚರಣೆ ನಡೆಯಲಿದೆ.

ಬಸವ ಜಯಂತಿ ಅಂಗವಾಗಿ ಬೆಳಿಗ್ಗೆ 9.45ಕ್ಕೆ ಕಕ್ಕೆಹೊಳೆ ಸಮೀಪವಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ತಿಳಿಸಿದ್ದಾರೆ.

ತಾಲೂಕು ಆಡಳಿತದ ವತಿಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ ಸ್ತ್ರೀಶಕ್ತಿ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಬಸವ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ.

ತಾಲೂಕು ದಂಡಾಧಿಕಾರಿ ಜಿ.ಎಸ್. ಕೃಷ್ಣ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದ ಸಾನ್ನಿಧ್ಯವನ್ನು ವಿರಕ್ತ ಮಠಾಧೀಶ ವಿಶ್ವೇಶ್ವರ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಅಭಿನವ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಓ.ಎಲ್.ವಿ. ಚರ್ಚ್‍ನ ಧರ್ಮಗುರು ಫಾ. ವಿನ್ಸೆಂಟ್ ಮೊಂತೆರೋ, ಜಲಾಲೀಯ ಮಸೀದಿಯ ಧರ್ಮಗುರು ಕೆ.ಎಂ. ಅಬೂಬಕರ್ ಸಿದ್ದಿಖ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಅಧ್ಯಕ್ಷೆ ಪುಷ್ಪರಾಜೇಶ್, ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ವನಜ, ಜಿ.ಪಂ. ಸದಸ್ಯೆ ಪೂರ್ಣಿಮ ಗೋಪಾಲ್, ತಾ.ಪಂ. ಸದಸ್ಯೆ ಹೆಚ್.ಎನ್. ತಂಗಮ್ಮ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಬಸವ ಜಯಂತಿ ಅಂಗವಾಗಿ ಕಕ್ಕೆಹೊಳೆ ಸಮೀಪ ನಿರ್ಮಿಸಲಾಗಿರುವ ಅಶ್ವಾರೂಢ ಬಸವೇಶ್ವರರ ಪ್ರತಿಮೆಯನ್ನು ಸುಣ್ಣಬಣ್ಣಗಳಿಂದ ಅಲಂಕರಿಸಲಾಗಿದೆ.