ಮಡಿಕೇರಿ, ಮೇ 3: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ವೀರಾಜಪೇಟೆ ತಾಲೂಕಿನ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಪರಿಶೀಲಿಸಿ ಪಿ.ಡಿ.ಓ. ಅವರಿಂದ ಮಾಹಿತಿ ಪಡೆದರು.

ಸಾರ್ವಜನಿಕರಿಂದ ರಸ್ತೆ, ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ ಸಮಸ್ಯೆಗಳನ್ನು ಆಲಿಸಿದರು. ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಜಾಗ ಗುರುತಿಸಿ ಪ್ರಸ್ತಾವನೆಯನ್ನು ಕಳುಹಿಸಿಕೊಡಲು ಪಿ.ಡಿ.ಓ. ಅವರಿಗೆ ಸೂಚಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮದ ಅಭಿವೃದ್ಧಿಯಲ್ಲಿ ಯಾವದೇ ರಾಜಕೀಯ ಬೇಡ. ಗ್ರಾಮ ಪಂಚಾಯಿತಿ ಸದಸ್ಯರು ಪಕ್ಷಭೇದ ಮರೆತು ಕೆಲಸ ಮಾಡಿದಲ್ಲಿ ಮಾತ್ರ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ, ಸದಸ್ಯರು, ಪಿ.ಡಿ.ಓ., ಇಲಾಖಾಧಿಕಾರಿಗಳು ಮತ್ತಿತರರು ಹಾಜರಿದ್ದರು.

ಬಳಿಕ ನಾಲ್ಕೇರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿನ ಸಾರ್ವಜನಿಕರ ಕುಂದುಕೊರತೆ ಪರಿಶೀಲಿಸಿದರು. ಈ ಸಂದರ್ಭ ಪಿ.ಡಿ.ಓ. ಧÀರಣಿ ಗೈರು ಹಾಜರಾಗಿದ್ದು, ಗ್ರಾಮ ಪಂಚಾಯಿತಿಯ ಮಾಹಿತಿಗಳು ಸಮರ್ಪಕವಾಗಿ ಲಭ್ಯವಾಗದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರಿಂದ ಮಾಹಿತಿ ಪಡೆದು ಗ್ರಾಮ ಪಂಚಾಯಿತಿಯ ಕಾರ್ಯಕ್ರಮಗಳ ಬಗ್ಗೆ ಪರಿಶೀಲನೆ ಮಾಡಿದರು. ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುತ್ತಪ್ಪ, ಉಪಾಧ್ಯಕ್ಷ ರಾಮು, ಸದಸ್ಯರು ಸಿಬ್ಬಂದಿ ವರ್ಗ, ಇಲಾಖಾ ಅಧಿಕಾರಿಗಳು ಹಾಜರಿದ್ದರು.

ಕಾನೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು. ಪಿ.ಡಿ.ಓ. ಅವರಿಂದ ಮಾಹಿತಿ ಪಡೆದು ಗ್ರಾಮ ಪಂಚಾಯಿತಿಯ ಕಾರ್ಯಕ್ರಮಗಳ ಬಗ್ಗೆ ಪರಿಶೀಲನೆ ಮಾಡಿದರು. ನಂತರ ಸಭೆಗೆ ಬಂದಿದ್ದ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ಮಾತನಾಡಿದ ಅವರು, ತನ್ನ ಕಾರ್ಯವ್ಯಾಪ್ತಿಯೊಳಗೆ ಸಮಸ್ಯೆಗಳನ್ನು ಆಯಾ ಪ್ರಾಧಿಕಾರಿಗಳ ಮೂಲಕ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಪಡುತ್ತೇನೆ. ಅರಣ್ಯ, ಕಂದಾಯ ಇಲಾಖೆಯ ಸಮಸ್ಯೆಗಳು ಬಹಳ ಇದೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸಲು ಸೂಕ್ತ ಕ್ರಮ ವಹಿಸಲಾಗುವದು. ಗ್ರಾಮದ ಅಭಿವೃದ್ಧಿಗೆ ಒಟ್ಟಾಗಿ ಸಹಕಾರ ನೀಡಿ ಕಾರ್ಯನಿರ್ವಹಿಸುವಂತೆ ಹೇಳಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೀತ, ಸದಸ್ಯ ಸುರೇಶ್, ಆರ್.ಎಂ.ಸಿ. ಸದಸ್ಯ ಪ್ರಕಾಶ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಸಿಬ್ಬಂದಿವರ್ಗ, ಇಲಾಖಾಧಿಕಾರಿಗಳು ಮತ್ತಿತರರು ಹಾಜರಿದ್ದರು.