ಮಡಿಕೇರಿ ಮೇ 3: ಭಗೀರಥ ಬಳಗದವರು ಸರ್ಕಾರದ ಸೌಲಭ್ಯಗಳನ್ನು ಪಡೆದು ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ ಅವರು ಸಲಹೆ ಮಾಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಶ್ರೀ ಭಗೀರಥ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸತತ ಪ್ರಯತ್ನ ಪಟ್ಟಾಗ ಯಾವದೇ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ಭಗೀರಥ ಪ್ರಯತ್ನ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಭಗೀರಥ ಅವರು ಶ್ರದ್ಧೆ, ಕಠಿಣ ಶ್ರಮದಿಂದ ಇತರರಿಗೆ ಮಾದರಿಯಾಗಿ ಬದುಕು ನಡೆಸಿದರು. ಇವರ ಆದರ್ಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಮೈಗೂಡಿಸಿಕೊಳ್ಳು ವಂತಾಗಬೇಕು ಎಂದು ಅವರು ಹೇಳಿದರು. ಇತ್ತೀಚಿನ ದಿನಗಳಲ್ಲಿ ನದಿಯ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಹಲವು ಕಾರ್ಯ ಯೋಜನೆಗಳು ನಡೆಯುತ್ತಿವೆ. ಆ ನಿಟ್ಟಿನಲ್ಲಿ ಭಗೀರಥ ಪ್ರಯತ್ನಗಳು ಮುಂದುವರೆಯಬೇಕು ಎಂದು ಅವರು ಹೇಳಿದರು.

ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅವರು ಮಾತನಾಡಿ ಹಲವು ಮಹರ್ಷಿಗಳು, ದಾಸರು, ಶರಣರು, ಸಂತರು, ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ನೀತಿ ಪಾಠಗಳ ಬಗ್ಗೆ ಅಧ್ಯಯನ ಮಾಡಬೇಕಿದೆ. ಆ ನಿಟ್ಟಿನಲ್ಲಿ ನಡೆದುಕೊಳ್ಳಬೇಕಿದೆ ಎಂದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ದೇಶದಲ್ಲಿ ನದಿಗಳಿಗೆ ಮಾತೃರೂಪ ನೀಡಿ ಪೂಜಿಸುವ ಪದ್ದತಿ ಇಂದಿಗೂ ಇದೆ. ಗಂಗೆ, ಕಾವೇರಿಯಂತಹ ನದಿಗಳ ಪಾವಿತ್ರ್ಯತೆಯನ್ನು ಕಾಪಾಡುವದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ಉಪ್ಪಾರ ಸಮಾಜದವರು ಸಂಘಟಿತರಾಗಬೇಕು. ಉಪ್ಪಾರ ಅಭಿವೃದ್ದಿ ನಿಗಮವನ್ನು ಸರ್ಕಾರ ಸ್ಥಾಪಿಸಿದ್ದು, ನಿಗಮದ ಶಾಖೆ ಜಿಲ್ಲೆಯಲ್ಲಿ ಆರಂಭವಾಗಬೇಕು ಎಂದು ಅವರು ಮನವಿ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಮಾತನಾಡಿ, ಸಮಾಜಕ್ಕೆ ಉತ್ತಮ ಸಂದೇಶ ನೀಡಿದವರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳು ವಂತಾಗಬೇಕು. ಆ ನಿಟ್ಟಿನಲ್ಲಿ ಸತತ ಪ್ರಯತ್ನವಿದ್ದಾಗ ಯಶಸ್ಸುಗಳಿಸಲು ಸಾಧ್ಯ. ಆ ದಿಸೆಯಲ್ಲಿ ಮುಂದೆ ಸಾಗಬೇಕು ಎಂದು ಹೇಳಿದರು. ಬಂಟವಾಳದ ಕ್ಷೇತ್ರ ಸಂಪನ್ಮೂಲ ಅಧಿಕಾರಿ ನಾರಾಯಣ ಗೌಡ ಮಾತನಾಡಿ, ಕ್ಷತ್ರೀಯ ವಂಶಕ್ಕೆ ಸೇರಿದ ಭಗೀರಥ ಮಹಾರಾಜರು ದಕ್ಷಿಣ ಭಾರತವನ್ನು ಪ್ರತಿನಿಧಿಸಿದರು. ದ್ರಾವಿಡ ಪ್ರಾಂತ್ಯದಲ್ಲಿ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದರು ಎಂದು ಹೇಳಿದರು. ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು. ಉಪ್ಪಾರ ಸಮಾಜದ ಪರಮೇಶ್ವರ್ ಅವರು ಸಮುದಾಯ ಭವನ ನಿರ್ಮಿಸಿಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು. ಮಣಜೂರು ಮಂಜುನಾಥ್ ಸ್ವಾಗತಿಸಿದರು. ಬಿ.ಸಿ. ಶಂಕರಯ್ಯ ನಿರೂಪಿಸಿದರು. ಷಡಕ್ಷರಿ ಮತ್ತು ತಂಡದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಎಲ್.ಎನ್. ಕುಳ್ಳಯ್ಯ ವಂದಿಸಿದರು.