ಸೋಮವಾರಪೇಟೆ, ಮೇ 9: ಪ್ರಾಥಮಿಕ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕನ್ನಡವನ್ನು ಸ್ಪಷ್ಟವಾಗಿ ಬರೆಯುವ ಮತ್ತು ಓದುವ ಹವ್ಯಾಸವನ್ನು ರೂಢಿಸಿದರೆ ಮಾತ್ರ ಕನ್ನಡ ಭಾಷೆಗೆ ಉತ್ತಮ ಭವಿಷ್ಯ ಎಂದು ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕ ಪರಶಿವಮೂರ್ತಿ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್‍ನ ತಾಲೂಕು ಘಟಕದ ವತಿಯಿಂದ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಆಯೋಜಿಸಲಾಗಿದ್ದ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪೊಲೀಸ್ ಇಲಾಖೆಯಲ್ಲೂ ಕವಿ ಹೃದಯದ, ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡಬೇಕೆಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ವಕೀಲರ ಸಂಘದ ಅಧ್ಯಕ್ಷರಾದ ಎಂ.ಬಿ. ಅಭಿಮನ್ಯು ಕುಮಾರ್ ಮಾತನಾಡಿ, ಕನ್ನಡ ಭಾಷೆಯ ಬೆಳವಣಿಗೆಯೊಂದಿಗೆ ಉಪ ಭಾಷೆಗಳ ಬೆಳವಣಿಗೆಯೂ ಆಗಬೇಕು. ಲಿಪಿ ಇಲ್ಲದ ಕೊಡವ, ತುಳು, ಕೊಂಕಣಿ, ಇನ್ನಿತರ ಭಾಷೆಗಳು ಕನ್ನಡದಲ್ಲಿಯೇ ಇರುವದರಿಂದ ಕನ್ನಡ ಭಾಷೆಯ ಬೆಳವಣಿಗೆಗೆ ಎಲ್ಲಾ ಭಾಷೆಗಳನ್ನು ಮಾತನಾಡುವವರ ಸಹಕಾರ ಅತ್ಯಗತ್ಯ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪ್ರತಿನಿಧಿಗಳಾದ ಅಶ್ವತ್ ಕುಮಾರ್, ಕವನ್ ಕಾರ್ಯಪ್ಪ, ನಾಗರಾಜ್ ಶೆಟ್ಟಿ, ಗೌರವ ಕಾರ್ಯದರ್ಶಿಗಳಾದ ಎಸ್.ಡಿ. ವಿಜೇತ್, ರಾಣಿ ರವೀಂದ್ರ, ಡಿ.ಪಿ. ಲೋಕೇಶ್ ಉಪಸ್ಥಿತರಿದ್ದರು.