ಮಡಿಕೇರಿ, ಮೇ 10: ಸ್ಥಗಿತಗೊಂಡಿರುವ ಕೊಳವೆ ಬಾವಿಗಳನ್ನು ಕೂಡಲೇ ಮುಚ್ಚು ವಂತಾಗಲು ಅಗತ್ಯ ಕ್ರಮ ಕೈಗೊಳ್ಳು ವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಸಂಬಂಧ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಕೊಳವೆ ಬಾವಿ ಮುಚ್ಚದೆ ಅವಘಡಗಳಿಗೆ ತುತ್ತಾಗುವದು ಕಂಡುಬರುತ್ತದೆ. ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಕೊಳವೆ ಬಾವಿಗಳನ್ನು ಮುಚ್ಚಬೇಕು.

ಜಿಲ್ಲೆಯ ಕಾವಾಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಕಾವಾಡಿ ಸೇರಿದಂತೆ ಜಿಲ್ಲೆಯ ಯಾವದೇ ಗ್ರಾಮದಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅವರು ಹೇಳಿದರು.

ಗ್ರಾ.ಪಂ.ಗಳು ಸೇರಿದಂತೆ ನಗರ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳ ಬೇಕು ಎಂದು ಅವರು ಹೇಳಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ ಅವರು ಕುಡಿಯುವ ನೀರು ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇರುವ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ಜಿ.ಪಂ. ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ರಾಜ್‍ಕುಮಾರ್ ರೆಡ್ಡಿ, ತಹಶೀಲ್ದಾರರಾದ ಕುಸುಮ, ಮಹದೇವ ಸ್ವಾಮಿ, ಅಂತರ್ಜಲ ಅಧಿಕಾರಿ ಸೌಮ್ಯ, ತಾ.ಪಂ. ಇಓಗಳಾದ ಜೀವನ್ ಕುಮಾರ್, ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಸಂತ್ ಕುಮಾರ್, ಸಹಾಯಕ ಇಂಜಿನಿಯರ್ ಶಿವಕುಮಾರ್ ಇತರರು ಇದ್ದರು.