ಸೋಮವಾರಪೇಟೆ, ಮೇ 9: ಜೂನ್ 5ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರೂ ಸಹಕರಿಸಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮನವಿ ಮಾಡಿದರು.
ಸಮ್ಮೇಳನಕ್ಕೆ ಸಂಬಂಧಿಸಿದಂತೆ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ನೆಲ, ಜಲ ಸಂರಕ್ಷಣೆಗೆ ಪ್ರತಿಯೋರ್ವರೂ ಮುಂದಾಗಬೇಕು ಎಂದರು. ಕಾರ್ಯಕ್ರಮದ ಯಶಸ್ಸಿಗೆ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾಹಿತ್ಯ ಪರಿಷತ್‍ನ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಕನ್ನಡ ಪರ ಸಂಘಟನೆಗಳು, ಸಾರ್ವಜನಿಕರು ಶ್ರಮಿಸಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಮನವಿ ಮಾಡಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಬಿ.ಎ. ಜೀವಿಜಯ ಮಾತನಾಡಿ, ತಾಲೂಕು ಮಟ್ಟದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಜಾತಿ, ಪಕ್ಷಭೇದ ಮರೆತು ಒಟ್ಟಾಗಿ ಕನ್ನಡದ ಕೈಂಕರ್ಯವನ್ನು ಮಾಡಲು ಮುಂದಾಗಬೇಕೆಂದು ಕರೆ ನೀಡಿದರು.
ಇದೇ ಸಂದರ್ಭ ಉಪ ಸಮಿತಿಗಳನ್ನು ರಚಿಸಲಾಯಿತು. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಪ್ಪಚ್ಚು ರಂಜನ್ ಅವರನ್ನು ಆರಿಸಲಾಯಿತು.
ಮಾಜಿ ಸಚಿವ ಬಿ.ಎ. ಜೀವಿಜಯ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪರಾಜೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಎಲ್ಲಾ ಪದಾಧಿಕಾರಿಗಳು ಸದಸ್ಯರಾಗಿರುತ್ತಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ತಿಳಿಸಿದರು.
ಉಳಿದಂತೆ ಹಣಕಾಸು ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಪ್ಪಚ್ಚು ರಂಜನ್, ಸಂಚಾಲಕರಾಗಿ ಎ.ಎಸ್. ಮಲ್ಲೇಶ್ ಮತ್ತು ಎಸ್.ಎಂ. ಡಿಸಿಲ್ವಾ, ಆಹಾರ ಸಮಿತಿಯ ಅಧ್ಯಕ್ಷರಾಗಿ ಎ.ಪಿ. ವೀರರಾಜು, ವೇದಿಕೆ ಸಮಿತಿ ಅಧ್ಯಕ್ಷರಾಗಿ ಶೀಲಾ ಡಿಸೋಜ, ದ್ವಾರ ಸಮಿತಿ ಅಧ್ಯಕ್ಷರಾಗಿ ಕೆ.ಎ. ಆದಂ, ಅಲಂಕಾರ ಸಮಿತಿ ಅಧ್ಯಕ್ಷರಾಗಿ ವಿಜಯಲಕ್ಷ್ಮೀ ಸುರೇಶ್, ಸಾಂಸ್ಕøತಿಕ ಸಮಿತಿ ಅಧ್ಯಕ್ಷರಾಗಿ ಕೆ. ಎನ್. ದೀಪಕ್, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕವನ್ ಕಾರ್ಯಪ್ಪ, ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷರಾಗಿ ಜೆ.ಸಿ. ಶೇಖರ್, ಮೆರವಣಿಗೆ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಅಭಿಮನ್ಯು ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.
ಸಮ್ಮೇಳನ ಕುರಿತು ಎಲ್ಲಾ ಸಮಿತಿಗಳ ಎರಡನೇ ಹಂತದ ಪೂರ್ವಭಾವಿ ಸಭೆಯನ್ನು ತಾ. 15 ರಂದು ಪೂರ್ವಾಹ್ನ 10 ಗಂಟೆಗೆ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಸುವಂತೆ ತೀರ್ಮಾನಿಸಲಾಯಿತು.
ವೇದಿಕೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಎಚ್.ಜೆ. ಜವರಪ್ಪ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.