ಮಡಿಕೇರಿ, ಮೇ 15 : ಕ್ರಿಶ್ಚಿಯನ್ ಸಮುದಾಯಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮ ಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಬಳಸಿಕೊಂಡು ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದು, ಜೊತೆಗೆ ಆರ್ಥಿಕವಾಗಿ ಸಬಲರಾಗುವತ್ತ ಸ್ವ ಉದ್ಯೋಗ ಕೈಗೊಳ್ಳಲು ಗಮನಹರಿಸಬೇಕಿದೆ ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಹಾಗೂ ಕ್ರಿಶ್ಚಿಯನ್ ಅಭಿವೃದ್ಧಿ ಕೌನ್ಸಿಲ್‍ನ ಉಪಾಧ್ಯಕ್ಷೆ ಐವನ್ ಡಿಸೋಜ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಇರುವ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಅವರು ಮಾತನಾಡಿದರು.

ಸರ್ಕಾರ ಕ್ರೈಸ್ತ ವಿದ್ಯಾರ್ಥಿ ಗಳಿಗೆ ಶಿಷ್ಯ ವೇತನ, ವಸತಿ ನಿಲಯ, ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಅವಕಾಶ, ಹೀಗೆ ನಾನಾ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ವಿದ್ಯಾರ್ಥಿಗಳು ಪಡೆದುಕೊಂಡು ಶಿಕ್ಷಣ, ಸ್ವಯಂ ಉದ್ಯೋಗ ಕೈಗೊಳ್ಳಲು ಮುಂದಾಗಬೇಕು ಎಂದು ಅವರು ಹೇಳಿದರು.

ಬಡ ಕ್ರಿಶ್ಚಿಯನ್ನರ ಅನುಕೂಲಕ್ಕಾಗಿ ಸ್ವ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ, ಸಮುದಾಯ ಭವನ ನಿರ್ಮಾಣ, ಚರ್ಚ್‍ಗಳ ನವೀಕರಣ ಮತ್ತು ದುರಸ್ತಿಗಾಗಿ ಸಹಾಯಧನ, ಹೀಗೆ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಿಶ್ಚಿಯನ್ನರ ಶ್ರೇಯೋಭಿವೃದ್ಧಿ ಗಾಗಿ ಹೆಚ್ಚಿನ ಹಣ ಬಿಡುಗಡೆ ಮಾಡಿದ್ದಾರೆ. ಅವುಗಳನ್ನು ಬಳಸಿಕೊಳ್ಳು ವಂತಾಗಬೇಕು. ಅನುದಾನ ವನ್ನು ಸಮರ್ಪಕವಾಗಿ ವಿನಿಯೋಗ ಮಾಡಿಕೊಂಡಲ್ಲಿ ಇನ್ನಷ್ಟು ಅನುದಾನವನ್ನು ಒದಗಿಸುತ್ತೇನೆ ಎಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ. ಆದ್ದರಿಂದ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕರು ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸು ವಂತಾಗಲು ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುವುದು. ಕಾನೂನು ಪದವೀದರರಿಗೆ ವಕೀಲ ವೃತ್ತಿ ತರಬೇತಿಯಡಿ ಶಿಷ್ಯ ವೇತನ ನೀಡಲಾಗುವದು. ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣ ಪಡೆಯುತ್ತಿರು ವವರಿಗೆ ಪುಸ್ತಕ ಮತ್ತು ಕಲಿಕಾ ಸಾಮಗ್ರಿ ವಿತರಣೆ ಮತ್ತಿತರ ಯೋಜನೆಗಳಿದ್ದು, ಇವುಗಳನ್ನು ಬಳಸಿಕೊಳ್ಳುವಂತೆ ವಿಧಾನ ಪರಿಷತ್ತಿನ ಮುಖ್ಯ ಸಚೇತಕರು ಅವರು ವಿವರಿಸಿದರು. ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ.ಸುರೇಶ್ ಅವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕ್ರಿಶ್ಚಿಯನ್ನರಿಗಾಗಿ ಇರುವ ಸರ್ಕಾರದ ಕಾರ್ಯಕ್ರಮಗಳ ಸಂಬಂಧ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಶಿವಮೊಗ್ಗ ಕ್ರೈಸ್ತ ಅಭಿವೃದ್ಧಿ ಮಂಡಳಿಯ ಮುಖ್ಯಸ್ಥ ಮರಿಯಪ್ಪ, ರಾಜ್ಯ ಕ್ರೈಸ್ತ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಚಿಣ್ಣಪ್ಪ, ಪ್ರಮುಖ ಕೆ.ಟಿ.ಬೇಬಿ ಮ್ಯಾಥ್ಯು ಇದ್ದರು.