ಮಡಿಕೇರಿ, ಮೇ 26: ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ನಿರುದ್ಯೋಗಿ ಯುವ ಜನರು ಹೆಸರು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಕರೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಯುವ ಜನಾಂಗಕ್ಕೆ ಕರೆ ನೀಡಿದ ಅವರು, ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಕ್ರಮ ವಹಿಸಲು ಸೂಚಿಸಿದರು.
ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಕಂದಾಯ ಅಧಿಕಾರಿಗಳು ಹೆಚ್ಚು ಗಮನಹರಿಸಿ ಯೋಜನೆ ಯಶಸ್ಸಿಗೆ ಶ್ರಮಿಸಬೇಕು. ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿ ಸ್ವ ಉದ್ಯೋಗ ಪಡೆಯಲು ಅವಕಾಶ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ನಗರಸಭೆಗೆ ಎಸ್.ಟಿ.ಪಿ. ಯೋಜನೆಯಡಿ ಬೇಕಾಗಿರುವ ಜಾಗವನ್ನು ಶೀಘ್ರದಲ್ಲಿಯೇ ಹಸ್ತಾಂತರಿಸುವಂತೆ ಮಡಿಕೇರಿ ತಹಶೀಲ್ದಾರ್ ಸೂಚಿಸಿದರು.
ತೋಟಗಾರಿಕಾ ಇಲಾಖಾ ವ್ಯಾಪ್ತಿಯಲ್ಲಿ ಬರುವಂತಹ ಜಿಲ್ಲೆಯ ಎಲ್ಲಾ ಸಸ್ಯ ಕ್ಷೇತ್ರದ ಹೆಚ್ಚುವರಿ ಜಾಗವನ್ನು 15 ದಿನದೊಳಗೆ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ನಿರ್ದೇಶನ ನೀಡಿದರು.
ನೋಂದಣಿ ಇಲಾಖೆಯ ಎಲ್ಲಾ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಟಿ.ವಿ. ಅಳವಡಿಸುವಂತೆ ಸೂಚಿಸುತ್ತಾ, ಸಕಾಲದಲ್ಲಿ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಹಾಗೂ ನೋಂದಣಿ ಇಲಾಖೆಯಲ್ಲಿ ಇರುವಂತಹ ಕುಂದುಕೊರತೆಗಳನ್ನು ನಿವಾರಿಸುವಂತೆ ಜಿಲ್ಲಾಧಿಕಾರಿ ಅವರು ನೋಂದಣಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಕ್ರಮ ತಡೆಗೆ ಸೂಚನೆ
ಜಿಲ್ಲೆಯ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ತೆಗೆದುಕೊಂಡ ಕ್ರಮಗಳ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ ಅಕ್ರಮ ಮರಳು ಗಣಿಗಾರಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವಲ್ಲಿ ಮುಂದಾಗಬೇಕು. ಅನಿಧಿಕೃತವಾಗಿ ಮರಳು ತೆಗೆಯುವವರ ಮತ್ತು ಸಾಗಾಣಿಕೆ ಮಾಡುವವರ ವಿರುದ್ಧ ನಿಯಮಾನುಸಾರ ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಪಡಿಸಬೇಕು. ಸಂಪೂರ್ಣವಾಗಿ ಅಕ್ರಮ ಮರಳು ಗಣಿಗಾರಿಕೆ ತಡೆಯುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಅಕ್ರಮ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬರ ಪರಿಹಾರದ ನಿರ್ವಹಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಬರ ಪರಿಹಾರದ ಎಲ್ಲಾ ಕೆಲಸಗಳನ್ನು ತುರ್ತಾಗಿ ನಿರ್ವಹಿಸಿ ಪೂರ್ಣ ಗೊಳಿಸಬೇಕು ಎಂದು ಅವರು ಸೂಚಿಸಿದರು.
ಅಸಮರ್ಪಕ ಪಡಿತರ ವಿತರಣೆ ಮಾಡುತ್ತಿರುವ ನ್ಯಾಯಬೆಲೆ ಅಂಗಡಿಗಳ ಲೈಸನ್ಸ್ ರದ್ದು ಮಾಡುವಂತೆ ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.
ಬಿ.ಸಿ.ಎಂ. ಇಲಾಖೆಯ ಅಧಿಕಾರಿ ಕೆ.ವಿ. ಸುರೇಶ್ ಸಭೆಗೆ ಮಾಹಿತಿ ನೀಡುತ್ತಾ ಜಿಲ್ಲೆಯಲ್ಲಿ ಶೇ. 70 ರಷ್ಟು ವಿದ್ಯಾರ್ಥಿ ನಿಲಯಗಳು ಸ್ವಂತ ಕಟ್ಟಡ ಹೊಂದಿರುತ್ತದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಸೂಕ್ತ ಜಾಗ ಪಡೆದು ಸ್ವಂತ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಸ್ಮಶಾನದ ಜಾಗವನ್ನು ಸಂಬಂಧಿಸಿದ ಸಮುದಾಯಗಳಿಗೆ ಹಸ್ತಾಂತರಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ತಹಶೀಲ್ದಾರರಾದ ಕುಸುಮ, ಕೃಷ್ಣ, ಗೋವಿಂದರಾಜು, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಸಿ. ನಾಗರಾಜು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ರೇಷ್ಮ, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ಕಂದಾಯ ನಿರೀಕ್ಷಕರು, ಭಾಗ್ಯಲಕ್ಷ್ಮಿ, ಪ್ರಕಾಶ್, ಶ್ರೀಷಾ, ಅನಿಲ್ ಕುಮಾರ್, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.