ಮಡಿಕೇರಿ, ಮೇ 27: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ ಯಾರೇ ಸ್ಪರ್ಧಿಸಿದರೂ ಅವರನ್ನು ಗೆಲ್ಲಿಸುವದೇ ಯುವ ಕಾಂಗ್ರೆಸ್ಸಿಗರ ಗುರಿಯಾಗಲಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್‍ನ ಪ್ರಮುಖರು ಪಣತೊಟ್ಟಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ಯುವ ಘಟಕದ ಬಲವರ್ಧನೆಯ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಾಗುವದೆಂದು ವಿಶ್ವಾಸ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್‍ನ ಯುವ ಘಟಕದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಕ್ಷದ ಬಲವರ್ಧನೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಜಿಲ್ಲಾ ಕಾಂಗ್ರೆಸ್‍ನ ಪ್ರಬಾರ ಅಧ್ಯಕ್ಷರಾಗಿದ್ದ ಟಿ.ಪಿ. ರಮೇಶ್ ಅವರು ಇದೀಗ ಖಾಯಂ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಪಕ್ಷ ಬೆಳೆಸುವ ಯುವ ಕಾಂಗ್ರೆಸ್‍ನ ಉತ್ಸಾಹ ಮತ್ತಷ್ಟು ಹೆಚ್ಚಾಗಿದೆ ಎಂದರು.

ಯುವ ಸಮೂಹದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಜನರಿಗೆ ಮನದಟ್ಟು ಮಾಡಿಕೊಡುವ ಕಾರ್ಯವನ್ನು ಯುವ ಕಾರ್ಯಕರ್ತರು ಮಾಡಲಿದ್ದಾರೆ ಎಂದರು.

ಮಳೆಗಾಲ ಕಳೆದ ನಂತರ ಜಿಲ್ಲಾ ಯುವ ಕಾಂಗ್ರೆಸ್‍ನ ಬೃಹತ್ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ. ಬಡವರು, ದಲಿತರು, ಜನಸಾಮಾನ್ಯರು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಹಿತಕಾಯುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದ್ದು, 2018 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಹನೀಫ್ ಸಂಪಾಜೆ ತಿಳಿಸಿದರು.

ತಾ. 30 ರಂದು ಸಮಾವೇಶ

ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹೆಚ್. ವಿ. ಮಿಥುನ್ ಕುಮಾರ್ ಮಾತನಾಡಿ, ತಾ. 30 ರಂದು ಸೋಮವಾರಪೇಟೆ ಕೊಡವ ಸಮಾಜದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ರಮೇಶ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು. ಪಕ್ಷದಲ್ಲಿ ಯಾವದೇ ಗೊಂದಲಗಳಿಲ್ಲವೆಂದು ಸ್ಪಷ್ಟಪಡಿಸಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿಗಳಾದ ಶಾಫಿ ಕೊಟ್ಟಮುಡಿ, ಹೂವಯ್ಯ, ರೆಜಿತ್ ಕುಮಾರ್ ಹಾಗೂ ಪ್ರಮುಖರಾದ ರಾಘವೇಂದ್ರ ಉಪಸ್ಥಿತರಿದ್ದರು.