ಕುಶಾಲನಗರ, ಮೇ 27: ಸ್ವಚ್ಛ ಕೊಡಗು ಅಭಿಯಾನದ ಅಂಗವಾಗಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಜಲಾಶಯದ ಆವರಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ನಡೆಯಿತು. ಪಂಚಾಯಿತಿ ವ್ಯಾಪ್ತಿಯಲ್ಲಿ 3 ದಿನಗಳ ಕಾಲ ಹಮ್ಮಿಕೊಂಡಿರುವ ಸ್ವಚ್ಛತಾ ಕಾರ್ಯಕ್ರಮದ ಮೊದಲನೆ ದಿನ ಹಾರಂಗಿ ಪ್ರವಾಸಿ ಧಾಮದ ಬಳಿ ಪಂಚಾಯಿತಿ ಆಡಳಿತ ಮಂಡಳಿ ಪದಾಧಿಕಾರಿಗಳು, ಸಿಬ್ಬಂದಿಗಳು ಪೌರಕಾರ್ಮಿಕರೊಂದಿಗೆ ಸ್ವಚ್ಛತೆ ನಡೆಸಿದರು.
ರಸ್ತೆ ಬದಿಯಲ್ಲಿ ಬೆಳೆದಿದ್ದ ಕಾಡು ಗಿಡಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಅಲ್ಲಲ್ಲಿ ಹರಡಿದ್ದ ಖಾಲಿ ಬಾಟಲಿಗಳು, ಪ್ಲಾಸ್ಟಿಕ್, ಕಸ ತ್ಯಾಜ್ಯವನ್ನು ಬೇರ್ಪಡಿಸಿ ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಇದೇ ಸಂದರ್ಭ ಜಲಾಶಯದ ಪ್ರವೇಶದ್ವಾರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಸೂಚನಾ ಫಲಕ ಅಳವಡಿಸಲಾಯಿತು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ, ಕೊಡಗು ಜಿಲ್ಲೆಯನ್ನು ಕಸಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 3 ದಿನಗಳ ಕಾಲ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲು ಆದೇಶ ಹೊರಡಿಸಿದ್ದು ಈ ಹಿನ್ನೆಲೆ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯೆಷಾ ಮಾತನಾಡಿ, ಸ್ವಚ್ಛತಾ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಸಿ. ಲಕ್ಷ್ಮಿ, ಉಪಾಧ್ಯಕ್ಷ ಕೆ.ವಿ. ಸಣ್ಣಪ್ಪ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್. ಚಂದ್ರಮೋಹನ್, ಪಂಚಾಯಿತಿ ಸದಸ್ಯರುಗಳು ಪಾಲ್ಗೊಂಡಿದ್ದರು.