ಕೂಡಿಗೆ, ಮೇ 31: ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಕೆರೆಯ ಜಾಗ ಒತ್ತುವರಿಯಾಗಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕೆಲವು ಗ್ರಾಮ ಪಂಚಾಯಿತಿ ಸದಸ್ಯರು ಈ ಹಿಂದೆ ಕೆರೆಯ ಹೂಳೆತ್ತುವ ಸಂದರ್ಭ ಶಾಸಕರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸರ್ವೆ ಕಾರ್ಯ ನಡೆಸಲು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರನ್ವಯ ಇಂದು ಕಂದಾಯ ಅಧಿಕಾರಿಗಳು ಹಾಗೂ ಸರ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರ್ವೆ ಕಾರ್ಯ ಕೈಗೊಂಡರು.

ಸರ್ವೆ ನಡೆಯುವ ಆನೆಕೆರೆ ಜಾಗಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಖುದ್ದು ಭೇಟಿ ನೀಡಿ ಪರಿಶೀಲಿಸಿ, ಕ್ರಮಬದ್ಧವಾಗಿ ನಡೆಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಮಾತನಾಡಿದ ಶಾಸಕರು, ಆನೆಕೆರೆಯು ಪುರಾತನ ಇತಿಹಾಸವುಳ್ಳ ಕೆರೆಯಾಗಿದ್ದು, ಈ ಕೆರೆಯು ಒತ್ತುವರಿಯಾಗುತ್ತಿರುವದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಸರ್ವೆ ಆದ ನಂತರ ಮುಂದಿನ ದಿನಗಳಲ್ಲಿ ಇದರ ಅಭಿವೃದ್ಧಿಗೆ ಶಾಸಕರ ನಿಧಿಯಿಂದ ಹಣ ಬಿಡುಗಡೆಗೊಳಿಸಿ, ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳಲಾಗುವದು ಎಂದು ತಿಳಿಸಿದರು. ಈ ಸಂದರ್ಭ ಜಿ.ಪಂ. ಸದಸ್ಯೆ ಮಂಜುಳಾ, ತಾ.ಪಂ. ಸದಸ್ಯ ಗಣೇಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಭಾಸ್ಕರ್ ನಾಯಕ್, ಸಾವಿತ್ರಿ ರಾಜನ್, ಜ್ಯೋತಿ ಪ್ರಮೀಳಾ, ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಬೋಗಪ್ಪ, ತಾಲೂಕು ಯುವ ಮೋರ್ಚಾದ ಉಪಾಧ್ಯಕ್ಷ ಚಂದ್ರ ಮೂಡ್ಲಿಗೌಡ, ನಗರ ಬಿಜೆಪಿ ಅಧ್ಯಕ್ಷ ಕೆ.ಜೆ ಮನು, ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಮುಖಂಡರುಗಳಾದ ವೈಶಾಖ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.