ಮಡಿಕೇರಿ, ಜೂ. 3: ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಜಾತ್ಯತೀತ ಮನೋಭಾವದ ಆಡಳಿತವನ್ನು ನೀಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವೆಂದು ಅಭಿಪ್ರಾಯಪಟ್ಟಿರುವ ಐಎನ್‍ಟಿಯುಸಿಯ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊಡಗಿನ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಸಂಘಟನೆಗಾಗಿ ಹೊದವಾಡ ಕೊಟ್ಟಮುಡಿಗೆ ಭೇಟಿ ನೀಡಿದ ಅವರು, ಯುವ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಂ. ಶಾಫಿ ಮಾತನಾಡಿ, ಮೂರು ದಿನಗಳ ಕಾಲ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಐಎನ್‍ಟಿಯುಸಿ ಬೈಕ್ ಜಾಥಾ ನಾಲ್ಕು ವರ್ಷಗಳ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಿದ್ದು ಮಾತ್ರವಲ್ಲದೆ, ಯುವಕರು ಕಾಂಗ್ರೆಸ್ ಪಕ್ಷದೆಡೆಗೆ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ ಹಮೀದ್, ಪ್ರಮುಖರಾದ ಅಶ್ರಫ್ ಹಾಗೂ ಸ್ಥಳೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.