ಮಡಿಕೇರಿ, ಜೂ. 3: ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವದರೊಂದಿಗೆ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಮುಂದಾಗಬೇಕು ಎಂದು ಮುಳ್ಳುಸೋಗೆ ಗ್ರಾ.ಪಂ. ಸದಸ್ಯ ಹರೀಶ್ ಕರೆ ನೀಡಿದರು.
ಗೊಂದಿಬಸವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದು ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತಿದೆ. ಜೊತೆಗೆ ಸರ್ಕಾರಿ ಶಾಲೆಯಲ್ಲಿ ಓದು ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಲು ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಬಿಸಿಯೂಟದಂತಹ ಯೋಜನೆಗಳು ಹಳ್ಳಿಯ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತಿದೆ ಎಂದರು.
ಹಳ್ಳಿಯ ಮಕ್ಕಳಲ್ಲಿ ಪ್ರತಿಭೆಗಳು ಅಡಗಿರುತ್ತದೆ. ಗ್ರಾಮೀಣ ಭಾಗದ ಮಕ್ಕಳೇ ಇಂದು ಸಹ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ಅವರು ಪ್ರಶಂಸೆ ವ್ಯಕ್ತ ಪಡಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಎಸ್.ಕೆ. ಜಲಜಾಕ್ಷಿ ಅವರು ತಮ್ಮ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಆ ಮೂಲಕ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭ ದಾಖಲಾತಿ ಆಂದೋಲನದ ಅಂಗವಾಗಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಜಾಥಾವನ್ನು ನಡೆಸಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪೋಷಕರಲ್ಲಿ ಮನವಿ ಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರುಗಳಾದ ಪುಷ್ಪ, ಶೋಭ, ಯಮುನ, ಸುನಂದ, ಶಾರದ, ಮುಖ್ಯ ಶಿಕ್ಷಕಿ ಜಲಜಾಕ್ಷಿ ಹಾಜರಿದ್ದರು.