ಕುಶಾಲನಗರ/ಕೂಡಿಗೆ, ಜೂ. 6: ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಗ್ರಾಮಗಳ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ತಾತ್ಕಾಲಿಕ ಶಿಬಿರಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದಿಷ್ಟ ಕಾಲಾವಕಾಶ ನಿಗದಿಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ತಿಳಿಸಿದ್ದಾರೆ.ಅವರು ಎರಡು ದಿನಗಳ ಕಾಲ ಶಿಬಿರಗಳ ಪರಿಶೀಲನೆ ನಡೆಸಿ ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಸುದ್ದಿಗಾರರಿಗೆ ಮಾಹಿತಿ ಒದಗಿಸಿದರು. ದಿಡ್ಡಳ್ಳಿ ಗಿರಿಜನರ ಸಮಸ್ಯೆಗೆ ಕೊಡಗು ಜಿಲ್ಲಾಡಳಿತ ಶಾಶ್ವತ ಪರಿಹಾರ ಒದಗಿಸುವಲ್ಲಿ ಸಂಪೂರ್ಣ ಸಫಲರಾಗಿದ್ದು ಸದ್ಯದಲ್ಲಿಯೇ ಎಲ್ಲಾ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಲಾಗುವದು. ಶಿಬಿರದಲ್ಲಿ ಅವಶ್ಯವಿರುವ 30 ಕ್ಕೂ ಅಧಿಕ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಂಬಂಧಿಸಿದ ಇಲಾಖೆಗಳು ಕಾರ್ಯೋನ್ಮುಖವಾಗುತ್ತಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.

(ಮೊದಲ ಪುಟದಿಂದ) ನಂತರ ಶಾಶ್ವತ ವಸತಿ ಕಟ್ಟಡಗಳ ನಿರ್ಮಾಣ ಕಾರ್ಯ ನಡೆಯಲಿದೆ. ಎಲ್ಲಾ ಕಾರ್ಯಯೋಜನೆಗಳನ್ನು ಬೆಂಗಳೂರಿನಿಂದಲೇ ಗಮನಿಸಲಾಗುವದು ಅವರು ತಿಳಿಸಿದರು.

ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಜಿಲ್ಲಾಧಿಕಾರಿ ಡಾ. ಆರ್.ವಿ. ಡಿಸೋಜ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪುನÀರ್ವಸತಿ ಕೇಂದ್ರಗಳ ವಾಸ್ತವಾಂಶ ಅರಿಯಲು ಭೇಟಿ ನೀಡಿದ್ದು ಬ್ಯಾಡಗೊಟ್ಟ ಶಿಬಿರದಲ್ಲಿ ರಾತ್ರಿ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಾಸ್ತವ್ಯ ಹೂಡಿರುವದಾಗಿ ಮಾಹಿತಿ ಒದಗಿಸಿದರು. ದಿಡ್ಡಳ್ಳಿಯ ಫಲಾನುಭವಿಗಳಿಗೆ ತುರ್ತಾಗಿ ಎರಡು ಕೇಂದ್ರಗಳಲ್ಲಿ ನಿವೇಶನ ಒದಗಿಸಲಾಗಿದ್ದು ಬಸವನಹಳ್ಳಿ ಕೇಂದ್ರದಲ್ಲಿ 181, ಬ್ಯಾಡಗೊಟ್ಟ ಶಿಬಿರದಲ್ಲಿ 282 ಜನರಿಗೆ ವ್ಯವಸ್ಥೆ ಕಲ್ಪಿಸಲಾಗುವದು ಎಂದು ಮಾಹಿತಿ ನೀಡಿದರು.

ಈ ಎರಡು ಶಿಬಿರಗಳು ಇತರೆಡೆಗೆ ಮಾದರಿಯಾಗುವಂತೆ ಎಲ್ಲಾ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಗಿರಿಜನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಮಗಾರಿ ವಿಳಂಬವಾದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಯನ್ನು ಹೊಣೆಗಾರರನ್ನಾಗಿ ಮಾಡುವ ಎಚ್ಚರಿಕೆ ನೀಡಲಾಗಿದೆ ಎಂದರು.

ಜಿಲ್ಲಾಡಳಿತಕ್ಕೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಇದಕ್ಕೂ ಮುನ್ನ ಮಣಿವಣ್ಣನ್ ಅವರ ನೇತೃತ್ವದಲ್ಲಿ ಜಿಲ್ಲಾ ಆಡಳಿತದ ಪ್ರಮುಖ ಇಲಾಖೆಗಳ ಅಧಿಕಾರಿಗಳ ಸಭೆ ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್, ಪುನರ್ವಸತಿ ಕೇಂದ್ರಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದಿಷ್ಟ ಜವಾಬ್ದಾರಿ ವಹಿಸುವ ಮೂಲಕ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶ ನೀಡಿದರು.

ನಿರ್ಮಿತಿ ಕೇಂದ್ರದ ಅಧಿಕಾರಿ ಯೊಬ್ಬರಿಗೆ ಸಮರ್ಪಕವಾಗಿ ಕೆಲಸ ನಡೆಯದಿದ್ದಲ್ಲಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವ ದಾಗಿ ತಾಕೀತು ಮಾಡಿದರು.

ಈ ಸಂದರ್ಭ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಾರುಲತಾ ಸೋಮಲ್, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರಾದ ರೇವಣ್ಣಪ್ಪ, ವಾಲ್ಮೀಕಿ ಭವನ ವ್ಯವಸ್ಥಾಪಕ ನಿರ್ದೇಶಕ ಪೆದ್ದಪ್ಪಯ್ಯ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು, ಪುನರ್ವಸತಿ ಕೇಂದ್ರದ ಪ್ರಮುಖರು ಇದ್ದರು.